ಮನೆ ರಾಜ್ಯ ತೇಜಸ್ ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ತೇಜಸ್ ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಧಾನಿ ನರೇಂದ್ರ ಮೋದಿ

0

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಶನಿವಾರ) ಬೆಂಗಳೂರಿಗೆ ಆಗಮಿಸಿದ್ದಾರೆ. ಅವರು ಎಚ್‌ ಎಎಲ್‌ ಘಟಕಕ್ಕೆ ಭೇಟಿ ನೀಡಿದ್ದು, ಅಲ್ಲಿ ತೇಜಸ್ ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ.

ತೇಜಸ್‌ ನಲ್ಲಿ ಕಿರು ಹಾರಾಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಅನುಭವ ವಿಸ್ಮಯಕಾರಿಯಾಗಿತ್ತು. ನಮ್ಮ ದೇಶದ ಸ್ಥಳೀಯ ಶಕ್ತಿ ಸಾಮರ್ಥ್ಯಗಳ ಮೇಲಿನ ವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸಿದೆ. ನಮ್ಮ ರಾಷ್ಟ್ರೀಯ ಸಾಮರ್ಥ್ಯದ ಬಗ್ಗೆ ನನಗೆ ಹೆಮ್ಮೆ ಮತ್ತು ಆಶಾವಾದ ಹುಟ್ಟುವಂತೆ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಿಧಾನಸಭೆ ಚುನಾವಣೆ ಬಳಿಕ ಆ.​ 26 ರಂದು ಪ್ರಧಾನಿ ಮೋದಿ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ್ದರು. ಚಂದ್ರಯಾನ-3 ಯಶಸ್ವಿ ಹಿನ್ನೆಲೆಯಲ್ಲಿ ಈ ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಿದ್ದರು. ಅದಾದ 3 ತಿಂಗಳ ಬಳಿಕ ಪ್ರಧಾನಿ ಮತ್ತೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.

ವಿಶೇಷ ವಿಮಾನದಲ್ಲಿ ಇಂದು ಬೆಳಿಗ್ಗೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್‌) ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಸಂಸ್ಥೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ತೇಜಸ್ ವಿಮಾನಗಳ ಸೌಲಭ್ಯ ಸೇರಿದಂತೆ ಅವುಗಳ ಉತ್ಪಾದನಾ ಸೌಲಭ್ಯವನ್ನು ಪರಿಶೀಲನೆ ನಡೆಸಿದ್ದಾರೆ. ಬಳಿಕ ಚುನಾವಣಾ ಪ್ರಚಾರಕ್ಕಾಗಿ ಅವರು ತೆಲಂಗಾಣಕ್ಕೆ ಪ್ರಯಾಣ ಬೆಳಸಿದ್ದಾರೆ.

ಭಾರತೀಯ ವಾಯುಪಡೆ ಇತ್ತೀಚೆಗೆ 12 ಸುಖೋಯ್‌ –30 (Su-30MKI) ಯುದ್ಧವಿಮಾನಗಳನ್ನು ಖರೀದಿಸಲು ಸರ್ಕಾರಿ ಸ್ವಾಮ್ಯದ ಎಚ್‌ ಎಎಲ್‌ ಗೆ ಟೆಂಡರ್ ನೀಡಿತ್ತು.