ಅಮರಾವತಿ: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಖಾಸಗಿ ಬಸ್ ವೊಂದು ಆಟೊಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಾಸಗಿ ಬಸ್ ಚಿತ್ತೂರಿನಿಂದ ಹೈದರಾಬಾದ್ಗೆ ತೆರಳುತ್ತಿದ್ದಾಗ ಮತ್ತೊಂದು ಬಸ್ ಅನ್ನು ಓವರ್ ಟೆಕ್ ಮಾಡುವ ವೇಳೆ ಆಟೊಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿ ಕೃಷ್ಣ ಮೋಹನ್ ತಿಳಿಸಿದ್ದಾರೆ.
ಆಟೊದಲ್ಲಿ ಪ್ರಯಾಣಿಸುತ್ತಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಗಾಯಗೊಂಡಿರುವ ಮತ್ತಿಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಸ್ನಲ್ಲಿದ್ದ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.