ಮನೆ ರಾಜ್ಯ ಆಸ್ತಿ ತೆರಿಗೆ ೧ ತಿಂಗಳು ವಿಸ್ತರಣೆ: ಡಿ.ಕೆ. ಶಿವಕುಮಾರ್

ಆಸ್ತಿ ತೆರಿಗೆ ೧ ತಿಂಗಳು ವಿಸ್ತರಣೆ: ಡಿ.ಕೆ. ಶಿವಕುಮಾರ್

0

ಬೆಂಗಳೂರು : ಆಸ್ತಿ ತೆರಿಗೆ ಸುಸ್ತಿದಾರರಿಗಾಗಿ ಜಾರಿಗೆ ತರಲಾಗಿದ್ದ ಒಂದು ಬಾರಿ ಪರಿಹಾರ ಯೋಜನೆ (ಒಟಿಎಸ್)ಯ ಕಾಲಾವಧಿ (ಜುಲೈ ೩೧) ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಒತ್ತಡದ ಮೇರೆಗೆ ಇದನ್ನು ಒಂದು ತಿಂಗಳ ಕಾಲ ಅಂದರೆ ಆಗಸ್ಟ್ ೩೧ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

Join Our Whatsapp Group

೧೩ನೇ ನ್ಯಾನೋ ತಂತ್ರಜ್ಞಾನ ಅಂತಾರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಜತೆ ಶುಕ್ರವಾರ ಮಾತನಾಡಿದ ಶಿವಕುಮಾರ್ ಅವರು, ಈವರೆಗೂ ೩ ಸಾವಿರ ಕೋಟಿಯಷ್ಟು ಆಸ್ತಿ ತೆರಿಗೆ ಸಂಗ್ರಹವಾಗಿದ್ದು, ಹೆಚ್ಚುವಾರಿಯಾಗಿ ೪೦೦ ಕೋಟಿ ತೆರಿಗೆ ಸಂಗ್ರಹವಾಗಿದೆ. ಕೆಲ ಬದಲಾವಣೆ ಮಾಡಿಕೊಳ್ಳಬೇಕು ಮತ್ತು ಒಟಿಎಸ್ ಕಾಲಾವಧಿ ಒಂದು ತಿಂಗಳು ವಿಸ್ತರಣೆ ಮಾಡಬೇಕು ಎಂದು ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಒತ್ತಡ ಬರುತ್ತಿದೆ. ಸರ್ವರ್ ಸಮಸ್ಯೆ ಹಾಗೂ ಮತ್ತೆ ಕೆಲವರು ಚೆಕ್ ನೀಡಿದ್ದು, ಜುಲೈ ೩೧ರವರೆಗೆ ನೀಡಲಾಗಿದ್ದ ಕಾಲಾವಧಿಯನ್ನು ಒಂದು ತಿಂಗಳ ಕಾಲ ಅಂದರೆ ಆಗಸ್ಟ್ ೩೧ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದರು.

ಪ್ರಾಮಾಣಿಕವಾಗಿ ತೆರಿಗೆ ಪಾವತಿ ಮಾಡುತ್ತಿರುವವರಿಗೆ ತೊಂದರೆಯಾಗದ ರೀತಿಯಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಲಾಗುವುದು. ಒಂದು ವೇಳೆ ಯಾರಾದರೂ ಹೆಚ್ಚಿಗೆ ಹಣ ಪಾವತಿ ಮಾಡಿದ್ದರೆ, ಮುಂದಿನ ಬಾರಿ ಆಸ್ತಿ ತೆರಿಗೆ ಪಾವತಿ ವೇಳೆ ಅದನ್ನು ವಜಾಗೊಳಿಸಲಾಗುವುದು. ಈ ವಿಚಾರದಲ್ಲಿ ಅನಗತ್ಯವಾಗಿ ಗಾಬರಿಯಾಗುವುದು ಬೇಡ ಎಂದು ಹೇಳಿದರು.