ನವದೆಹಲಿ (New Delhi): ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆ ವಿರೋಧಿಸಿ ನಡೆದಿದ್ದ ಪ್ರತಿಭಟನೆಯ ವೇಳೆ ರೈಲ್ವೆ ಆಸ್ತಿ-ಪಾಸ್ತಿಗೆ 259.44 ಕೋಟಿ ರೂ. ನಷ್ಟವಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
ಜೂನ್ 14ರಿಂದ 30ರ ನಡುವೆ ರೈಲುಗಳ ಸಂಚಾರ ರದ್ದು ಮಾಡಿದ ಪರಿಣಾಮ 102.96 ಕೋಟಿ ರೂ. ಮರುಪಾವತಿ ಮಾಡಲಾಗಿದೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಪ್ರತಿಭಟನೆಯ ಕಾರಣ ಜೂನ್ 15ರಿಂದ 23ರ ನಡುವೆ ಒಟ್ಟು 2,132 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿತ್ತು ಎಂದೂ ಹೇಳಿದ್ದಾರೆ.
ರಕ್ಷಣಾ ಪಡೆಗಳಲ್ಲಿ ಅಲ್ಪಾವಧಿ ಕರ್ತವ್ಯದ ನೇಮಕಾತಿ ಯೋಜನೆ ‘ಅಗ್ನಿಪಥ’ ವಿರೋಧಿಸಿ ಬಿಹಾರ ಮತ್ತು ತೆಲಂಗಾಣದಲ್ಲಿ ನಡೆದ ಪ್ರತಿಭಟನೆಯ ವೇಳೆ ಪ್ರತಿಭಟನಕಾರರು ರೈಲುಗಳಿಗೆ ಬೆಂಕಿ ಹಚ್ಚಿದ್ದರು. ಜಾರ್ಖಂಡ್ ಮತ್ತು ಉತ್ತರ ಪ್ರದೇಶದಲ್ಲೂ ಪ್ರತಿಭಟನೆಗಳು ನಡೆದಿದ್ದವು.