ಬೆಂಗಳೂರು: ಕರ್ನಾಟಕ ರಾಜ್ಯದ ಪಾಲಿನ ಹಣವನ್ನು ಕೇಂದ್ರ ಸರ್ಕಾರ ನೀಡಬಹುದು ಎಂಬ ವಿಶ್ವಾಸವಿತ್ತು. ಆದರೆ, ಕೇಂದ್ರ ಸರ್ಕಾರವು ಅದರ ಮಾನದಂಡದಂತೆ ಕೂಡ ರಾಜ್ಯಕ್ಕೆ ಹಣ ನೀಡುತ್ತಿಲ್ಲ. ಈ ಕಾರಣಕ್ಕಾಗಿ ದೆಹಲಿಯ ಜಂತರ್ ಮಂತರ್ ನಲ್ಲಿ ಇಡೀ ಕರ್ನಾಟಕ ಸರ್ಕಾರ ಧರಣಿ ನಡೆಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ಸೋಮವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರದ ವಿರುದ್ಧ ನಾವು ಧ್ವನಿ ಎತ್ತಲೇಬೇಕಾದ ಅನಿವಾರ್ಯತೆ ಎದುರಾಗಿದೆ ಎಂದರು.
ದೆಹಲಿಯಲ್ಲಿ ನಮ್ಮ ಇಡೀ ಸರ್ಕಾರ ಪ್ರತಿಭಟನೆ ಮಾಡಲಿದೆ. ಈ ಪ್ರತಿಭಟನೆಯಲ್ಲಿ ಎಲ್ಲಾ ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಪ್ರತಿಭಟನೆಯಲ್ಲಿ ಎಲ್ಲಾ ಸಂಸದರು ಕೂಡ ಭಾಗಿಯಾಗಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು.
ದಮ್, ತಾಕತ್ ಏನಿದ್ದರೂ ಬಿಜೆಪಿಯವರದ್ದು, ನಮ್ಮದೇನಿದ್ದರೂ ಬಡವರ ಬಗ್ಗೆ ಬದ್ಧತೆ ಅಷ್ಟೇ
ಜಂಟಿ ಪತ್ರಿಕಾಗೋಷ್ಠಿ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿದ ಸಿದ್ದರಾಮಯ್ಯ, ಮೋದಿ ಸುಳ್ಳುಗಳಿಗೆ ನೀವು ಯಾರು ದಾರಿ ತಪ್ಪಲ್ಲ ಎಂಬುದಾಗಿ ನಂಬಿಕೆ ಇಟ್ಟುಕೊಂಡಿದ್ದೇನೆ. 4,530 ಕೋಟಿ ರೂಪಾಯಿ ಹಣ ಈಗ ಶಕ್ತಿ ಯೋಜನೆಗೆ ಕೊಟ್ಟಿದ್ದೇವೆ ಎಂದರು.
‘ತಾಕತ್ ಇದ್ರೆ, ಧಮ್ ಇದ್ರೆ’ ಎಂಬುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳುತ್ತಾರೆ. ಇವೆಲ್ಲವೂ ಮಾಡೋಕೆ ದಮ್ಮು, ತಾಕತ್ ಬೇಡ. ರಾಜಕೀಯ ಇಚ್ಛಾಶಕ್ತಿ ಇರಬೇಕು. ನಮ್ಮದೇನಿದ್ದರೂ ಬಡವರ ಬಗ್ಗೆ ಬದ್ಧತೆ ಅಷ್ಟೇ. ದಮ್, ತಾಕತ್ ಏನಿದ್ದರೂ ಬಿಜೆಪಿಯವರದ್ದು ಎಂದು ಸಿದ್ದರಾಮಯ್ಯ ಹೇಳಿದರು.
ಕೇಂದ್ರ ಸರ್ಕಾರದ ವಿರುದ್ಧ ಈವರೆಗೆ ರಾಜ್ಯ ಸರ್ಕಾರ ಧರಣಿ ನಡೆಸಿರಲಿಲ್ಲ. ಅನಿವಾರ್ಯವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ. ಇದು ರಾಜಕೀಯ ಪ್ರೇರಿತ ಪ್ರತಿಭಟನೆಯಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ನಾಳೆ ಸಂಜೆಯೇ ದೆಹಲಿಗೆ ಹೋಗುತ್ತೇವೆ, ನಾಡಿದ್ದು ಪ್ರತಿಭಟನೆ ಮಾಡುತ್ತೇವೆ. ಸಂವಿಧಾನ ಅಳವಡಿಸಿಕೊಂಡ ಬಳಿಕ ಒಕ್ಕೂಟ ವ್ಯವಸ್ಥೆ ಒಪ್ಪಿಕೊಂಡಿದ್ದೇವೆ. ರಾಜ್ಯಗಳಿಂದ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಹಣ ಹೋಗುತ್ತದೆ. ಹಣಕಾಸು ಆಯೋಗ ನಿರ್ಧರಿಸಿದಂತೆ ಈ ಹಣ ರಾಜ್ಯಗಳಿಗೆ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.
14ನೇ ಹಣಕಾಸು ಆಯೋಗದಂತೆ ರಾಜ್ಯಕ್ಕೆ ಶೇ 42ರಷ್ಟು ಹಣ ನೀಡಬೇಕು. 15ನೇ ಹಣಕಾಸು ಆಯೋಗದಂತೆ ರಾಜ್ಯಕ್ಕೆ ಶೇ 41ರಷ್ಟು ಹಣ ನೀಡಬೇಕು. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕವೇ ಈ ಆಯೋಗ ರಚನೆ ಆಗಿತ್ತು ಎಂದು ಸಿದ್ದರಾಮಯ್ಯ ಹೇಳಿದರು.
ಮಧ್ಯಂತರ ವರದಿಯಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ 5498 ಕೋಟಿ ರೂಪಾಯಿ ವಿಶೇಷ ಅನುದಾನಕ್ಕೆ ಶಿಫಾರಸು ಮಾಡಲಾಗಿತ್ತು. ಆದರೆ, ಇದನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರಸ್ಕರಿಸಿದ್ದರು. ಕೇಂದ್ರ ಸರ್ಕಾರ ತಿರಸ್ಕರಿಸಿದ್ದರಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಪೆರಿಫರಲ್ ರಿಂಗ್ ರಸ್ತೆಗೆ 3000 ಕೋಟಿ ರೂಪಾಯಿ ಹಾಗೂ ಜಲಮೂಲಗಳ ಅಭಿವೃದ್ಧಿಗೆ 3000 ಕೋಟಿ ನೀಡಬೇಕೆಂದು ಶಿಫಾರಸು ಮಾಡಲಾಗಿತ್ತು. ಒಟ್ಟು ಕೇಂದ್ರ ಸರ್ಕಾರದಿಂದ 11,495 ಕೋಟಿ ರೂಪಾಯಿ ರಾಜ್ಯಕ್ಕೆ ಬರಬೇಕಿತ್ತು. ಒಟ್ಟು 5 ವರ್ಷದಲ್ಲಿ 73 ಸಾವಿರ ಕೋಟಿ ನಮಗೆ ಕಡಿಮೆಯಾಗಿದೆ. ಬಳಿಕ ಜಿಎಸ್‌ಟಿ ವ್ಯವಸ್ಥೆ ಜಾರಿಯಾಯಿತು. ಜಿಎಸ್‌ಟಿಯಿಂದ ತೆರಿಗೆ ಹೆಚ್ಚಳವಾಗುತ್ತೆ. ರಾಜ್ಯಗಳಿಗೆ ನಷ್ಟವಾದ್ರೆ ಪರಿಹಾರ ರೂಪದಲ್ಲಿ ಹಣ ನೀಡ್ತೇವೆ ಎಂದಿದ್ರು. ಭದ್ರಾ ಮೇಲ್ದಂಡೆ ಯೋಜನೆಗೆ ಹಣ ನೀಡ್ತೇವೆ ಎಂದಿದ್ದರು. ಆದರೆ, ಬಿಡುಗಡೆ ಮಾಡಿಲ್ಲ. ಹಲವು ಬಾರಿ ಮನವಿ ಮಾಡಿದ್ರೂ ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಿಲ್ಲ. ಹೀಗಾಗಿ ಕೇಂದ್ರದ ಗಮನ ಸೆಳೆಯಲು ನಾಡಿದ್ದು ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
ತೆರಿಗೆ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ
ರಾಜ್ಯದಿಂದ 4 ಲಕ್ಷ 30 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹವಾಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. 100 ರೂ. ತೆರಿಗೆ ಕಟ್ಟಿದರೆ ನಮಗೆ ಶೇ 12-13ರಷ್ಟು ವಾಪಸ್ ಬರುತ್ತಿದೆ. ಆದರೆ, ಕರ್ನಾಟಕಕ್ಕೆ ಅನ್ಯಾಯವಾಗಿಲ್ಲವೆಂದು ರಾಜ್ಯ ಬಿಜೆಪಿ ನಾಯಕರು ಹೇಳುತ್ತಾರೆ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.