ಬೆಂಗಳೂರು: ಬಿಜೆಪಿ ಸರಕಾರ ಅವಧಿಯಲ್ಲಿ ನಡೆದ ಪಿ ಎಸ್ ಐ, ಗಂಗಾಕಲ್ಯಾಣ ಯೋಜನೆಯ ಅಕ್ರಮಗಳ ಬಗ್ಗೆ ತನಿಖೆ ನಡೆಸಬೇಕು, ಇಲ್ಲಾಂದ್ರೆ ಹೊಂದಾಣಿಕೆ ರಾಜಕಾರಣದ ಬಗ್ಗೆ ಇರುವ ಅನುಮಾನಕ್ಕೆ ಇಂಬು ಕೊಟ್ಟಂತಾಗುತ್ತದೆ ಎಂದು ಪ್ರಿಯಾಂಕ್ ಖರ್ಗೆ ಪ್ರಸ್ತಾಪ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಪಿಎಸ್ ಐ ಪರೀಕ್ಷೆ ಅಕ್ರಮ, 40% ಕಮಿಷನ್, ಇತರ ನೇಮಕಾತಿ ಪರೀಕ್ಷೆಗಳಲ್ಲಿ ನಡೆದ ಅಕ್ರಮ ಆರೋಪದ ಕುರಿತಾಗಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದ್ದು, ಈ ಆರೋಪಗಳ ಬಗ್ಗೆ ತನಿಖೆಗೆ ಒತ್ತಾಯ ಕೇಳಿಬಂದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ವಿಚಾರ ಪ್ರಸ್ತಾಪಿಸಿ ತನಿಖೆಗೆ ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.
ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮಾತಿಗೆ ಸಾಥ್ ನೀಡಿದ ಕಂದಾಯ ಸಚಿವ ಕೃಷ್ಣೆಬೈರೇಗೌಡ ಹಾಗೂ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹಿಂದಿನ ಬಿಜೆಪಿ ಸರ್ಕಾರ ಇದ್ದ ಸಂದರ್ಭದಲ್ಲಿ ಪಿಎಸ್ಐ, ಬಿಟ್ ಕಾಯಿನ್ ಹಾಗೂ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿದೆ. ಈ ನಿಟ್ಟಿನಲ್ಲಿ ಅಕ್ರಮಗಳನ್ನು ಬಯಲಿಗೆ ಎಳೆಯ ಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಸಚಿವರ ಒತ್ತಾಯಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಈ ವಿಚಾರವಾಗಿ ಎಸ್ ಐ ಟಿ ರಚನೆ ಮಾಡಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ, ಹಾಗೂ ಶೀಘ್ರದಲ್ಲೇ ಎಸ್ ಐ ಟಿ ರಚನೆ ಕುರಿತಾಗಿ ಅಧಿಕೃತ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.