ಬೆಂಗಳೂರು (Bengaluru)- ಪಿಎಸ್‍ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಆರೋಪ ಮಾಡುವವರು ಮಾಹಿತಿ ಕೊಟ್ಟರೆ ತನಿಖೆ ಸಮರ್ಪಕವಾಗಿ ನಡೆಯಲು ಸಹಕಾರಿಯಾಗಲಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ (S.T.Somshekar) ಹೇಳಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮದ ಆರೋಪ ಕೇಳಿ ಬಂದ ತಕ್ಷಣ ತನಿಖೆಗೆ ಆದೇಶಿಸಲಾಗಿದೆ. ಮುಖ್ಯಮಂತ್ರಿ ಸಮರ್ಥರಿದ್ದು, ಉಪ್ಪು ತಿಂದವರು ನೀರು ಕುಡಿಯಲಿದ್ದಾರೆ ಎಂದರು.
ಪಿಎಸ್‌ಐ ನೇಮಕಾತಿ ವಿಷಯದಲ್ಲಿ ಪ್ರಾಮಾಣಿಕ ತನಿಖೆ ನಡೆಯಬೇಕಿದೆ. ಅಪರಾಧಿಗಳಿಗೆ ಶಿಕ್ಷೆ ಆಗಲೇಬೇಕು ಎಂದ ಸೋಮಶೇಖರ್, ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ನೋಟಿಸ್ ಕೊಡಬಾರದು ಎಂದಿದೆಯೇ? ದಾಖಲಾತಿ ಕೊಡಿ ಎಂದು ಕೇಳಿದ್ದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.
ಕಾಂಗ್ರೆಸ್‌ನವರು ನಾಲ್ಕು ವರ್ಷ ಮಲಗಿದ್ದರು. ಜೀವಂತ ಇದ್ದೇವೆ ಎಂದು ತೋರಿಸಲು ಈಗ ನಿರಾಧಾರ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ ಅವರು, ರಾಮನಗರ ಜಿಲ್ಲೆ ಒಕ್ಕಲಿಗರ ಜಿಲ್ಲೆ ಎಂಬ ಕಾರಣಕ್ಕೆ ನಾಯಕತ್ವಕ್ಕಾಗಿ ಪೈಪೋಟಿ ನಡೆಯುತ್ತಿದೆ. 4 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸುತ್ತಿರುವ ಕಾರಣದಿಂದ ಸಚಿವ ಡಾ.ಅಶ್ವತ್ಥನಾರಾಯಣ್ ವಿರುದ್ಧ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಆಧಾರರಹಿತ ಆರೋಪ ಮಾಡುತ್ತಿದ್ದಾರೆ ಎಂದರು.