ಬೆಂಗಳೂರು (Bengaluru) ಪಿಎಸ್ಐ ಅಕ್ರಮ ನೇಮಕಾತಿ (Psi recruitment scam) ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೇಮಕಾತಿ ವಿಭಾಗದ ಎಡಿಜಿಪಿ (ADGP) ಅಮೃತ್ ಪೌಲ್ (Amrit paul) ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ನೇಮಕಾತಿ ವಿಭಾಗದ ನೂತನ ಎಡಿಜಿಪಿ ಆಗಿ ಆರ್.ಹಿತೇಂದ್ರ (R.Hitendra) ಅವರನ್ನು ನೇಮಕ ಮಾಡಲಾಗಿದೆ. ಹಿತೇಂದ್ರ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿದ್ದು, ಪ್ರಸ್ತುತ ಅವರು ಅಪರಾಧ ಮತ್ತು ತಾಂತ್ರಿಕ ಸೇವೆಗಳ ವಿಭಾಗದ ಎಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ರಾಜ್ಯದಲ್ಲಿ ನಡೆದ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಮೊದಲ ತಲೆದಂಡವಾಗಿ, ಪೊಲೀಸ್ ನೇಮಕಾತಿ ಎಡಿಜಿಪಿ ಅಮೃತ್ ಪೌಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. 1995 ಬ್ಯಾಚ್ ನ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರನ್ನು ಆಂತರಿಕ ಭದ್ರತಾ ದಳದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ.
ಪಿಎಸ್ಐ ಅಕ್ರಮ ನೇಮಕಾತಿ ಹಗರಣದಲ್ಲಿ ಅಮೃತ್ ಪೌಲ್ ಅವರು ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಕಾಂಗ್ರೆಸ್ ಆರೋಪದ ಹಿನ್ನೆಲೆಯಲ್ಲಿ ಅಮೃತ್ ಪೌಲ್ ರನ್ನು ವರ್ಗಾವಣೆ ಮಾಡಲಾಗಿದೆ.
ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಗಳ ನೇಮಕಾತಿಯಲ್ಲಿ ವಂಚನೆ ನಡೆದಿರುವುದು ಇತ್ತೀಚೆಗೆ ಬೆಳಕಿಗೆ ಬಂದಿದ್ದು, ವಂಚನೆ ಕುರಿತು ಸಿಐಡಿ ತನಿಖೆ ನಡೆಸುತ್ತಿದೆ. ಹಲವು ಆರೋಪಿಗಳನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ.