ರಾಯಚೂರು: ಮಹಿಳೆಯೊಬ್ಬರು ಬೆಂಕಿಯಲ್ಲಿ ಸುಟ್ಟುಕರಕಲಾದ ಘಟನೆ ಇಂದು ಬೆಳಗ್ಗೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದ ಗುಂಡುರಾವ್ ಕಾಲೊನಿಯಲ್ಲಿ ನಡೆದಿದೆ.
ಮಂಜುಳಾ (45) ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ಮೃತ ಮಹಿಳೆ ಹಟ್ಟಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಒಂದೆಡೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದ್ದು, ಮತ್ತೊಂದು ಕಡೆ ಯಾರಾದರೂ ಈಕೆಯನ್ನು ಕೊಲೆ ಮಾಡಿರಬಹುದು ಎನ್ನುವ ಆರೋಪವೂ ಸ್ಥಳೀಯರಿಂದ ಕೇಳಿ ಬಂದಿದೆ.
ಘಟನಾಸ್ಥಳಕ್ಕೆ ಹಟ್ಟಿ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಮಾಹಿತಿ ನೀಡಿರುವ ಹಟ್ಟಿ ಪೊಲೀಸರು, ಕಳೆದ ಎರಡ್ಮೂರು ವರ್ಷಗಳ ಹಿಂದೆ ಮಹಿಳೆಯ ಪತಿ ಮೃತಪಟ್ಟಿದ್ದಾರೆ. ಮಾನಸಿಕ ಖಿನ್ನತೆಗೆ ಒಳಗಾಗಿ ಇಂದು ಬೆಳಗ್ಗೆ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಸಹೋದರ ದೂರು ನೀಡಿದ್ದಾರೆ. ದೂರಿನ ಆಧಾರ ಮೇಲೆ ಮರಣೋತ್ತರ ಪರೀಕ್ಷೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.