ಮನೆ ಸುದ್ದಿ ಜಾಲ ರಾಯಚೂರು :ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ತೀವ್ರ ವಿರೋಧ

ರಾಯಚೂರು :ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ತೀವ್ರ ವಿರೋಧ

0

ರಾಯಚೂರು (ಜೂನ್​ 04) : ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳನ್ನ ವಿಲೀನಗೊಳಿಸಿ, ಕೆಪಿಎಸ್ ಮ್ಯಾಗ್ನೆಟ್ ಶಾಲಾ ಯೋಜನೆಗೆ ಮುಂದಾಗಿದೆ. ಆದರೆ ಈ ಯೋಜನೆಗೆ ಭಾರೀ ವಿರೋಧದ ಜೊತೆ ಸರ್ಕಾರಿ ಶಾಲೆಗಳ ವಿಲೀನಕ್ಕೆ ಜನಾಕ್ರೋಶ ವ್ಯಕ್ತವಾಗಿದೆ. ಗಡಿ ಜಿಲ್ಲೆ ರಾಯಚೂರಿನಲ್ಲಿ ಶೇಕಡ 50% ಖಾಯಂ ಶಿಕ್ಷಕರೇ ಇಲ್ಲಾ, ನೇಮಕ ಮಾಡುವುದನ್ನು ಬಿಟ್ಟು ಸರ್ಕಾರಿ ಶಾಲೆ ಮುಚ್ಚುವ ಹುನ್ನಾರ ನಡೆಯುತ್ತಿದೆ ಎಂದು ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ ಮಾಡಿವೆ. ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ, ರಾಜ್ಯದಲ್ಲಿ ಶೈಕ್ಷಣಿಕ ವಿಚಾರವಾಗಿ ಮಹತ್ವದ ಯೋಜನೆಗೆ ಮುಂದಾಗಿದೆ. ಆಯ್ದ ಸರ್ಕಾರಿ ಶಾಲೆಗಳನ್ನ ವಿಲೀನಗೊಳಿಸುವ ಮೂಲಕ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನ ಜಾರಿಗೆ ತಂದಿದೆ. ಈ ಯೋಜನೆಯಲ್ಲಿ ಆಯ್ದ ಸರ್ಕಾರಿ ಶಾಲೆಗಳನ್ನ ಗುರುತಿಸಿ ಅವುಗಳನ್ನ ವಿಲೀನ ಮಾಡಿ ಆಯಾ ವ್ಯಾಪ್ತಿಯಲ್ಲಿ ಕೆಪಿಎಸ್ ಶಾಲೆ ಶುರು ಮಾಡುವ ಯೋಜನೆ ಇದಾಗಿದೆ. ಇತ್ತ ರಾಯಚೂರು ಜಿಲ್ಲೆಯಲ್ಲಿ ಈ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಯೋಜನೆಯಡಿ ಸರ್ಕಾರಿ ಶಾಲೆಗಳ ವಿಲೀನ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದ್ದು, ಇದರಿಂದ ಜಿಲ್ಲೆಯ 100ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಮುಚ್ಚುವ ಭೀತಿ ಎದುರಾಗಿದೆ ಎಂದು ವಿವಿಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ ಎನ್ನಲಾಗಿದೆ.

ಹಾಗೂ ಈ ಬಗ್ಗೆ ಇಂದು ಎಐಡಿಎಸ್ಒ ಹಾಗೂ ಸಾರ್ವಜನಿಕ ಶಾಲೆ ಉಳಿಸಿ ಸಮಿತಿಯ ನೇತೃತ್ವದಲ್ಲಿ ರಾಯಚೂರು ನಗರದ ಹೊಸ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ಮಾಡಲಾಗಿದೆ. ಪ್ರತಿಭಟನಾಕಾರರು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರುದ್ಧ ಪೋಸ್ಟ್‌ಕಾರ್ಡ್‌ಗಳನ್ನು ಪ್ರದರ್ಶಿಸಿ, ಶಾಲೆಗಳ ವಿಲೀನ ಪ್ರಕ್ರಿಯೆಯನ್ನು ತಕ್ಷಣ ಕೈಬಿಡುವಂತೆ ಹೋರಾಟಗಾರರು ಒತ್ತಾಯಿಸಿದರು. ಜಿಲ್ಲೆಯಲ್ಲಿ 50 ಕ್ಕೂ ಹೆಚ್ಚು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಆರಂಭಕ್ಕೆ ಸಿದ್ಧತೆ ನಡೆಯುತ್ತಿದ್ದು, ಇದರ ಪರಿಣಾಮವಾಗಿ 100ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ವಿಲೀನಗೊಳ್ಳುವ ಸಾಧ್ಯತೆ ಇದೆ. ಗ್ರಾಮೀಣ ಹಾಗೂ ನಗರ ಭಾಗದ ಬಡ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಇದರಿಂದ ಪ್ರತಿಕೂಲ ಪರಿಣಾಮ ಉಂಟಾಗಲಿದೆ ಎಂದು ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ. ಗ್ರಾಮಗಳಲ್ಲಿರುವ ಶಾಲೆಗಳು ಮುಚ್ಚಿದರೆ ವಿದ್ಯಾರ್ಥಿಗಳು ನಾಲ್ಕೈದು ಕಿ.ಮೀ ದೂರದ ಕೆಪಿಎಸ್ ಶಾಲೆಗಳಿಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ.

ಇದರಿಂದ ಬಡ ಕುಟುಂಬಗಳ ಮಕ್ಕಳಲ್ಲಿ ಶಾಲೆಯಿಂದ ದೂರ ಉಳಿಯುವವರ ಸಂಖ್ಯೆ ಹೆಚ್ಚುವ ಆತಂಕವಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ. ಇದೇ ವೇಳೆ ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ, ಮೂಲಭೂತ ಸೌಕರ್ಯಗಳ ಅಭಾವ ಸೇರಿದಂತೆ ಹಲವು ಸಮಸ್ಯೆಗಳು ತೀವ್ರವಾಗಿವೆ. ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ 5,624 ಶಿಕ್ಷಕರ ಹುದ್ದೆಗಳು ಮಂಜೂರಾಗಿದ್ದರೂ,  ಶೇಕಡ 50ರಷ್ಟು ಹುದ್ದೆಗಳು ಖಾಲಿ ಇವೆ ಎನ್ನಲಾಗಿದೆ. 266 ಏಕೋಪಾಧ್ಯಾಯ ಶಾಲೆಗಳು ಕೇವಲ ಒಬ್ಬ ಶಿಕ್ಷಕರಿಂದಲೇ ನಿರ್ವಹಣೆಯಾಗುತ್ತಿದ್ದು, ಅನೇಕ ಶಾಲೆಗಳಲ್ಲಿ ಖಾಯಂ ಶಿಕ್ಷಕರೇ ಇಲ್ಲ. ಹೀಗಾಗಿ ಅತಿಥಿ ಶಿಕ್ಷಕರ ನೇಮಕ ಮಾಡಲಾಗಿದೆ. ಇದಷ್ಟೇ ಅಲ್ಲ ಜಿಲ್ಲೆಯ 874 ಶಾಲೆಗಳಲ್ಲಿ ಶೌಚಾಲಯ ಸಮಸ್ಯೆಯೂ ಗಂಭೀರವಾಗಿದೆ. ಇಂತಹ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬದಲು ಸರ್ಕಾರ ಶಾಲೆಗಳ ವಿಲೀನಕ್ಕೆ ಮುಂದಾಗಿರುವುದು ಸರಿಯಲ್ಲ. ಮೂಲಭೂತ ಸೌಕರ್ಯ ಒದಗಿಸಿ, ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು. ಇಲ್ಲದಿದರೆ ಉಗ್ರ ಹೋರಾಟ ಮಾಡುವುದಾಗಿದೆ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.