ಬೆಂಗಳೂರು, ಆ. 3, 2024: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಮತ್ತು ಗಾಳಿಯಿಂದ ಆಗಿರುವ ಹಾನಿಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್) ಮಾನಂದಡಕ್ಕಿಂತ ಹೆಚ್ಚುವರಿಯಾಗಿ ವಿಶೇಷ ಪರಿಹಾರ ಪ್ಯಾಕೇಜ್ ನೀಡುವಂತೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಮುಖ್ಯಮಂತ್ರಿಯವರ್ಇಗೆ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರನ್ನು ಭೇಟಿಯಾಗಿ ಪರಿಹಾರ ಕುರಿತು ಸಮಾಲೋಚನೆ ನಡೆಸಿದ ಸಚಿವ ಜಾರ್ಜ್ ಅವರು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಿಂದ ಅಪಾರ ಹಾನಿಯಾಗಿದೆ. ಎನ್‌ಡಿಆರ್‌ಎಫ್ ಮಾನದಂಡದ ಅನ್ವಯ ನೆರವು ನಿಗದಿ ಮಾಡಿದರೆ ಜಿಲ್ಲೆಯಲ್ಲಿ ಪರಿಹಾರ ಕಾರ್ಯವನ್ನು ಸಮರ್ಪಕವಾಗಿ ಕೈಗೊಳ್ಳಲು ಸಾಧ್ಯವಿಲ್ಲ. ಹೀಗಾಗಿ ವಿಶೇಷ ಪ್ರಕರಣ ಎಂದು ಪರಿಗಣಿಸಿ ಜಿಲ್ಲೆಗೆ ಪ್ರಕೃತಿ ವಿಕೋಪ ಪರಿಹಾರಕ್ಕಾಗಿ ಹೆಚ್ಚುವರಿ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದಾರೆ.
“ಚಿಕ್ಕಮಗಳೂರು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಇತ್ತೀಚೆಗೆ ಭೇಟಿ ನೀಡಿ, ಆಗಿರುವ ತೊಂದರೆಗಳ ಬಗ್ಗೆ ಪರಿಶೀಲಿಸಿದ್ದೇನೆ. ಸಾಕಷ್ಟು ಮನೆಗಳು ಕುಸಿದಿದ್ದು, ರಸ್ತೆಗಳು ಕೂಡ ಹಾನಿಗೊಳಗಾಗಿವೆ. ಇದರಿಂದ ಸಂಪರ್ಕ ವ್ಯವಸ್ಥೆಯೂ ಅಸ್ತವ್ಯಸ್ತಗೊಂಡು ತಾತ್ಕಾಲಿಕವಾಗಿ ಪರ್ಯಾಯ ಸಂಪರ್ಕ ವ್ಯವಸ್ಥೆ ಕಲ್ಪಿಸಲಾಗಿದೆ. ಅನೇಕ ಕಡೆ ಭೂ ಕುಸಿತವುಂಟಾಗಿದ. ಇನ್ನು ಕೆಲವೆಡೆ ಭೂ ಕುಸಿತದ ಆತಂಕ ಕಾಣಿಸಿಕೊಂಡಿದೆ. ಮರಗಳು ಬಿದ್ದು ವಿದ್ಯುತ್ ಕಂಬ, ತಂತಿ, ಪರಿವರ್ತಕಗಳು ಹಾಳಾಗಿವೆ. ಇವೆಲ್ಲವನ್ನು ಸರಿಪಡಿಸಲು ಹಚ್ಚುವರಿ ಅನುದಾನದ ಅಗತ್ಯವಿದೆ ಎಂಬುದನ್ನು ಮುಖ್ಯಮಂತ್ರಿಯವರಿಗೆ ಮನವರಿಕೆ ಮಾಡಿಕೊಡಲಾಗಿದೆ,” ಎಂದು ಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಗಳು ಸಂಪೂರ್ಣ ಹಾನಿಗೊಳಗಾದವರಿಗೆ ತಾತ್ಕಾಲಿಕ ಪರಿಹಾರವಾಗಿ 1.20 ಲಕ್ಷ ರೂ. ಪರಿಹಾರವನ್ನು ಈಗಾಗಲೇ ನೀಡಲಾಗಿದೆ. ಉಳಿದಂತೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ 3.80 ಲಕ್ಷ ರೂ. ನೀಡಿ ಮನೆ ನಿರ್ಮಿಸಿಕೊಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅದೇ ರೀತಿ ಹಾನಿಗೊಳಗಾಗಿರುವ ಮತ್ತು ಕುಸಿದಿರುವ ರಸ್ತೆಗಳನ್ನು ತಾತ್ಕಾಲಿಕವಾಗಿ ದುರಸ್ತಿ ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಶಾಶ್ವತ ಪರಿಹಾರಕ್ಕೆ ಕ್ರಿಯಾಯೋಜನೆ ಸಿದ್ಧಪಡಿಸಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ. ಭೂಕುಸಿತಕ್ಕೂ ಶಾಶ್ವತ ಪರಿಹಾರ ಕಲ್ಪಿಸಬೇಕಾಗಿದೆ. ಎನ್‌ಡಿಆರ್‌ಎಫ್ ಅನ್ವಯ ಅನುದಾನ ನೀಡಿದರೆ ಈ ಎಲ್ಲಾ ಕೆಲಸಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ, ಎಂದು ಸಚಿವರು ಮುಖ್ಯಮಂತ್ರಿಯವರಿಗೆ ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆಗಿರುವ ಮಳೆಹಾನಿ ಬಗ್ಗೆ ಸಮಗ್ರ ವರದಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದ್ದು, ಸದ್ಯದಲ್ಲೇ ವರದಿಯನ್ನು ಸಲ್ಲಿಸಲಾಗುವುದು. ಈ ವರದಿ ಆಧರಿಸಿ ಜಿಲ್ಲೆಗೆ ಹೆಚ್ಚಿನ ನೆರವನ್ನು ರಾಜ್ಯ ಸರ್ಕಾರದಿಂದ ಒದಗಿಸಬೇಕು. ಆ ಮೂಲಕ ಜಿಲ್ಲೆಯ ಜನರ ನೆರವಿಗೆ ಧಾವಿಸಬೇಕು ಎಂದು ಸಚಿವರು ಕೋರಿದ್ದು, ಇದಕ್ಕೆ ಮುಖ್ಯಮಂತ್ರಿಯವರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ.