ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ ಆರಂಭವಾಗಿದ್ದು, ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, ಹಲವೆಡೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಭಾರಿ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಉಡುಪಿ ಮತ್ತು ಕೊಡಗು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇದರ ಬೆನ್ನಲ್ಲೇ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಅವರು ಇಂದು (ಜೂನ್ 12)ರಿಂದ ಅಂಗನವಾಡಿ, ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗಲಿದ್ದು, ಕೆಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕಡಲತೀರ ಹಾಗೂ ನದಿತೀರದ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಡಳಿತ ಸೂಚಿಸಿದೆ. ಮೀನಾರುಗಾರರು ನಾಡದೋಣಿಗಳ ಮೂಲಕ ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮಘಟ್ಟ ಪ್ರದೇಶದಲ್ಲಿ ಜೂನ್ 13 ಮತ್ತು 14ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಈ ದಿನಗಳಲ್ಲಿ ಜಿಲ್ಲೆಗೂ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ತಗ್ಗು ಪ್ರದೇಶಗಳು ಹಾಗೂ ನದಿತೀರದ ಪ್ರದೇಶಗಳಿಗೆ ಸಾರ್ವಜನಿಕರು ತೆರಳದಂತೆ ಸೂಚನೆ ನೀಡಿದೆ.
ಕೊಡಗು ಜಿಲ್ಲೆಯಲ್ಲಿ ಗುರುವಾರದಿಂದ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ನದಿತೀರ, ಬೆಟ್ಟ ಗುಡ್ಡಗಳ ನಿವಾಸಿಗಳಿಗೆ ಹೆಚ್ಚಿನ ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಹುಬ್ಬಳ್ಳಿ ನಗರದಲ್ಲೂ ಮಂಗಳವಾರ ಭಾರೀ ಮಳೆಯಾಗಿದೆ. ಗಬ್ಬೂರ್ ಬೈಪಾಸ್ ಸೇರಿದಂತೆ ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದ್ದಾರೆ.













