ನವದೆಹಲಿ: ರಾಜಸ್ಥಾನ ವಿಧಾನಸಭೆಗೆ ಇಂದು (ಶನಿವಾರ) ಮತದಾನ ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ಮತದಾನ ಮಾಡುವವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.
ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಎಲ್ಲಾ ವಯೋಮಾನದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸುವ ಮೂಲಕ ಹೊಸ ದಾಖಲೆ ಮಾಡುವಂತೆ ನಾನು ವಿನಂತಿಸುತ್ತೇನೆ. ಈ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ರಾಜ್ಯದ ಎಲ್ಲಾ ಯುವ ಮತದಾರರಿಗೆ ನನ್ನ ಶುಭಾಶಯಗಳು’ ಎಂದು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇಂದು ರಾಜಸ್ಥಾನದ 200 ವಿಧಾನಸಭೆ ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಲ್ಲಿ ಈಗಾಗಲೇ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.
ಅಹಿತಕರ ಘಟನೆಗಳು ನಡೆಯದಂತೆ ರಾಜ್ಯದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಕರಣಾಪುರ ಕ್ಷೇತ್ರದ ಮತದಾನವನ್ನು ಮುಂದೂಡಲಾಗಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 73 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಎಸ್ ಪಿ ಶಾಸಕರು ಮತ್ತು ಪಕ್ಷೇತರ ಶಾಸಕರ ಬೆಂಬಲದೊಂದಿಗೆ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು ಸರ್ಕಾರ ರಚಿಸಿದ್ದರು.