ಮನೆ ಕಾನೂನು ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದುಪಡಿಸಿದ ಹೈಕೋರ್ಟ್

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದುಪಡಿಸಿದ ಹೈಕೋರ್ಟ್

0

ರಾಜ್ಯದ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಪ್ರಕಟಿಸಿದ್ದ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ರದ್ದುಪಡಿಸಿದೆ. ಜೊತೆಗೆ, ಅಭ್ಯರ್ಥಿಗಳ ತಂದೆಯ ಆದಾಯ ಮತ್ತು ಜಾತಿ ಪ್ರಮಾಣ ಪತ್ರವನ್ನು ಪರಿಗಣಿಸಿ ಹೊಸದಾಗಿ ತಾತ್ಕಾಲಿಕ ಪಟ್ಟಿ ಸಿದ್ಧಪಡಿಸುವಂತೆ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆಗೆ ನಿರ್ದೇಶಿಸಿದೆ.

ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಪತಿಯ ಆದಾಯ ಹಾಗೂ ಜಾತಿ ಪ್ರಮಾಣ ಪತ್ರ ಪರಿಗಣಿಸಿದ್ದ ಶಿಕ್ಷಣ ಇಲಾಖೆಯ ಕ್ರಮ ಪ್ರಶ್ನಿಸಿ ಅಕ್ಷತಾ ಚೌಗಲ ಸೇರಿ ನೂರಾರು ಮಹಿಳಾ ಅಭ್ಯರ್ಥಿಗಳು ಸಲ್ಲಿಸಿದ್ದ 80 ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಮಾನ್ಯ ಮಾಡಿದೆ.

ಪ್ರಕರಣದ ಹಿನ್ನೆಲೆ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6ರಿಂದ 8ನೇ ತರಗತಿ) ನೇಮಕಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯು 2022ರ ಫೆಬ್ರವರಿ 22ರಂದು ಹೊರಡಿಸಿದ್ದ ಅಧಿಸೂಚನೆ ಮೇರೆಗೆ ಅರ್ಜಿ ಸಲ್ಲಿಸಿದ್ದ ಅರ್ಜಿದಾರ ಅಭ್ಯರ್ಥಿಗಳು, ಲಿಖಿತ ಪರೀಕ್ಷೆ ಬರೆದು ಅದರಲ್ಲಿ ಉತ್ತಮ ರ್ಯಾಂಕ್ ಗಳಿಸಿದ್ದರು. ಅಲ್ಲದೆ, 1:2 ಅನುಪಾತದ ತಾತ್ಕಾಲಿಕ ಪಟ್ಟಿಯಲ್ಲಿ ದಾಖಲೆಗಳ ಪರಿಶೀಲನೆಗೆ ಅರ್ಹರಾಗಿದ್ದರು. ದಾಖಲೆಗಳನ್ನು ಪರಿಶೀಲಿಸಿದ್ದ ಇಲಾಖೆಯು ಯಾವುದೇ ಪ್ರತಿಕ್ರಿಯೆಯನ್ನು ನೀಡಿರಲಿಲ್ಲ. ಆದರೆ, 2022ರ ನವೆಂಬರ್ 18ರಂದು ಪ್ರಕಟಿಸಲಾಗಿದ್ದ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಅರ್ಜಿದಾರರು ಸ್ಥಾನ ಪಡೆದಿರಲಿಲ್ಲ. ಇದರಿಂದ, ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ಅವರು “1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಅರ್ಜಿದಾರರಿಗಿಂತ ಕಡಿಮೆ ಅಂಕ ಪಡೆದಿರುವ ಅಭ್ಯರ್ಥಿಗಳ ಹೆಸರುಗಳಿವೆ. ಈ ಬಗ್ಗೆ ಡಿಡಿಪಿಐಗಳನ್ನು ವಿಚಾರಿಸಿದಾಗ ಮದುವೆಯಾಗಿರುವ ಮಹಿಳಾ ಅಭ್ಯರ್ಥಿಗಳು ಪತಿಯ ಆದಾಯ/ಜಾತಿ ಪ್ರಮಾಣ ಪತ್ರದ ಬದಲಾಗಿ ತಂದೆಯ ಆದಾಯ/ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಿರುವುದರಿಂದ ಅರ್ಜಿದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂಬುದಾಗಿ ತಿಳಿಸಿದ್ದಾರೆ” ಎಂದು ವಿವರಿಸಿದ್ದರು.

“ಇದೇ ಕಾರಣಕ್ಕೆ ಅರ್ಜಿದಾರರನ್ನು ಸಾಮಾನ್ಯ ವರ್ಗಕ್ಕೆ ಸೇರಿಸಲಾಗಿದೆ. ಅಭ್ಯರ್ಥಿಗಳಿಗೆ ಯಾವುದೇ ಮಾಹಿತಿ ನೀಡದೆ, ಸಾಮಾನ್ಯ ಆಭ್ಯರ್ಥಿಗಳ ವರ್ಗಕ್ಕೆ ಸೇರ್ಪಡೆ ಮಾಡಿರುವ ಕ್ರಮ ಸರಿಯಿಲ್ಲ. ಜತೆಗೆ, ಪತಿಯ ಆದಾಯ ಮತ್ತು ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸುವಂತೆ ಕೋರುವುದು ಕಾನೂನಿಗೆ ವಿರುದ್ಧವಾಗಿದೆ. ಆದ್ದರಿಂದ, ಪತಿಯ ಆದಾಯ ಹಾಗೂ ಜಾತಿ ಪ್ರಮಾಣಪತ್ರ ಪರಿಗಣಿಸಿ, 2022ರ ನವೆಂಬರ್ 18ರಂದು ಪ್ರಕಟಿಸಿರುವ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಬೇಕು” ಎಂದು ಕೋರಿದ್ದರು.

ಇದೀಗ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಾಲಯವು ತಾತ್ಕಾಲಿಕ ಆಯ್ಕೆಪಟ್ಟಿ ರದ್ದುಪಡಿಸಿದ್ದು, ಅಭ್ಯರ್ಥಿಗಳ ತಂದೆಯ ಆದಾಯ ಮತ್ತು ಜಾತಿ ಪ್ರಮಾಣ ಪತ್ರವನ್ನು ಪರಿಗಣಿಸಿ ಹೊಸದಾಗಿ ಪಟ್ಟಿ ಸಿದ್ಧಪಡಿಸುವಂತೆ ನಿರ್ದೇಶಿಸಿದೆ.

ಹಿಂದಿನ ಲೇಖನಬಸ್ಸಿಗೆ ಡಿಕ್ಕಿ ಹೊಡೆದ ಕಾರು: ನಾಲ್ವರ ಸಾವು
ಮುಂದಿನ ಲೇಖನಜಗತ್ತಿನಲ್ಲಿ ಭಾರತದ ಆರ್ಥಿಕತೆ ಬೆಳಗಲಿದೆ ಎಂಬ ಆಶಾಭಾವವಿದೆ: ಪ್ರಧಾನಿ ಮೋದಿ