ಮನೆ ಕಾನೂನು ಬಿಲ್ಕಿಸ್ ಬಾನು ಅತ್ಯಾಚಾರಿಗಳ ಬಿಡುಗಡೆ: ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ಬಿಲ್ಕಿಸ್ ಬಾನು ಅತ್ಯಾಚಾರಿಗಳ ಬಿಡುಗಡೆ: ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

0

ನವದೆಹಲಿ(New delhi): ಬಿಲ್ಕಿಸ್‌ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ನೀಡಿದೆ.

ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ವಕೀಲರಾದ ಕಪಿಲ್ ಸಿಬಲ್ ಹಾಗೂ ಅಪರ್ಣಾ ಭಟ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ನ್ಯಾಯಪೀಠ ಒಪ್ಪಿಗೆ ನೀಡಿದೆ.‌

ಅಪರಾಧಕ್ಕೆ ಕ್ಷಮಾಪಣೆ ನೀಡಿರುವುದನ್ನು ನಾವು ಪ್ರಶ್ನಿಸುತ್ತಿದ್ದೇವೆಯೇ ಹೊರತು ಸುಪ್ರೀಂ ಕೋರ್ಟ್ ಆದೇಶವನ್ನಲ್ಲ. ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಆಕ್ಷೇಪವಿಲ್ಲ. ಯಾವ ತತ್ವಗಳ ಆಧಾರದ ಮೇಲೆ ಅಪರಾಧಕ್ಕೆ ಕ್ಷಮಾಪಣೆ ನೀಡಲಾಗಿದೆ ಎಂಬುದನ್ನು ನಾವು ಪ್ರಶ್ನಿಸುತ್ತಿದ್ದೇವೆ ಎಂದು ಸಿಬಲ್ ಹೇಳಿದ್ದಾರೆ.

ಅಪರಾಧಿಗಳ ಕ್ಷಮಾಪಣೆ ಅರ್ಜಿಯನ್ನು ಪರಿಗಣಿಸುವಂತೆ ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಈ ಹಿಂದೆ ಸೂಚಿಸಿತ್ತು. ಬಿಲ್ಕಿಸ್‌ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳನ್ನು ಆಗಸ್ಟ್ 15ರಂದು ಗುಜರಾತ್‌ನ ಗೋದ್ರಾ ಉಪ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿತ್ತು. ಗುಜರಾತ್ ಸರ್ಕಾರದ ಕ್ಷಮಾಪಣೆ ನೀತಿ ಅ‌ನ್ವಯ ಈ ಕ್ರಮ ಕೈಗೊಳ್ಳಲಾಗಿತ್ತು. ಸರ್ಕಾರದ ಈ ಕ್ರಮಕ್ಕೆ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಈ ಮಧ್ಯೆ, ಅಪರಾಧಿಗಳ ಬಿಡುಗಡೆ ಕ್ರಮವನ್ನು ರದ್ದುಪಡಿಸಬೇಕು ಎಂದು ಮಹಿಳೆಯರು, ಸಾಮಾಜಿಕ ಕಾರ್ಯಕರ್ತರು ಸೇರಿದಂತೆ 6 ಸಾವಿರಕ್ಕೂ ಅಧಿಕ ನಾಗರಿಕರು ಇತ್ತೀಚೆಗೆ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ.