ಮನೆ ಶಿಕ್ಷಣ ನವೆಂಬರ್ ಅಂತ್ಯದೊಳಗೆ ರಾಜ್ಯ ಪಠ್ಯಕ್ರಮ ಚೌಕಟ್ಟು ಬಿಡುಗಡೆ: ಸಚಿವ ಬಿ.ಸಿ. ನಾಗೇಶ್‌

ನವೆಂಬರ್ ಅಂತ್ಯದೊಳಗೆ ರಾಜ್ಯ ಪಠ್ಯಕ್ರಮ ಚೌಕಟ್ಟು ಬಿಡುಗಡೆ: ಸಚಿವ ಬಿ.ಸಿ. ನಾಗೇಶ್‌

0

ಬೆಂಗಳೂರು(Bengaluru): ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿ ರಾಜ್ಯ ಪಠ್ಯಕ್ರಮ ಚೌಕಟ್ಟನ್ನು (ಎಸ್‌ಸಿಎಫ್‌) ಈ ತಿಂಗಳ ಅಂತ್ಯದೊಳಗೆ ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದರು.

ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ಕೇಂದ್ರ ಸರ್ಕಾರವು ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟನ್ನು ಈಗಾಗಲೇ ಬಿಡುಗಡೆ ಮಾಡಿದೆ. ಅದೇ ಮಾದರಿಯಲ್ಲಿ ರಾಜ್ಯ ಪಠ್ಯಕ್ರಮ ಚೌಕಟ್ಟು ರೂಪಿಸಲು ತಜ್ಞರ ಸಮಿತಿ ನೇಮಿಸಲಾಗುವುದು. ಸಮಿತಿಯ ವರದಿ ಆಧರಿಸಿ ಎಸ್‌’ಸಿಎಫ್‌ ಅಂತಿಮಗೊಳಿಸಿ, ಬಿಡುಗಡೆ ಮಾಡುತ್ತೇವೆ ಎಂದರು.

ಎನ್‌’ಇಪಿ ಅನುಷ್ಠಾನಕ್ಕಾಗಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಸಮಿತಿಯೊಂದನ್ನು ರಚಿಸಲಾಗಿದೆ. ಐಎಎಸ್‌ ಅಧಿಕಾರಿ ಎಂ.ಟಿ. ರೇಜು ಅವರನ್ನು ಸಮಿತಿಯ ಸಂಚಾಲಕರನ್ನಾಗಿ ನೇಮಿಸಲಾಗಿದೆ. ಡಿಸೆಂಬರ್‌ 25ರೊಳಗೆ ನೂತನ ಪಠ್ಯಕ್ರಮ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿಯ ಅನುಸಾರ ಬೋಧನಾ ಕ್ರಮದಲ್ಲಿ ಬದಲಾವಣೆ ತರುವ ಪ್ರಕ್ರಿಯೆ ಆರಂಭವಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿಗೆ ಚಾಲನೆ ನೀಡಲಾಗಿದೆ ಎಂದರು.

ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್‌ ವಿತರಿಸುವುದಕ್ಕೆ ಸಂಬಂಧಿಸಿದಂತೆ ಇಲಾಖೆಯು ಈವರೆಗೆ ಯಾವುದೇ ನಿರ್ಣಯವನ್ನೂ ಕೈಗೊಂಡಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.