ಮನೆ ರಾಜಕೀಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಾಲತಾಣದಿಂದ ಹಿಂದಿ ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ: ಸಿದ್ದರಾಮಯ್ಯ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಾಲತಾಣದಿಂದ ಹಿಂದಿ ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ: ಸಿದ್ದರಾಮಯ್ಯ

0

ಬೆಂಗಳೂರು(Bengaluru): ರಾಜ್ಯದ ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು‌ ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ ಎಂಬುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣವೇ ಸಾಕ್ಷಿ. ಮೊದಲು ಈ ಜಾಲತಾಣದಿಂದ ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಕುರಿತು ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, ಕೇಂದ್ರ ಸಚಿವ ಅಮಿತ್ ಶಾ ಭಾಗವಹಿಸಿದ್ದ ‘ಸಂಕಲ್ಪ್ ಸೆ ಸಿದ್ಧಿ’ ಎಂಬ ಕಾರ್ಯಕ್ರಮದ ಬ್ಯಾನರ್ ಸಂಪೂರ್ಣ ಹಿಂದಿಮಯವಾಗಿತ್ತು.‌ ಇನ್ನೊಂದೆಡೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತನ್ನ ಜಾಲತಾಣದಲ್ಲಿ ಹಿಂದಿಯ ಕಿರೀಟ ಇಟ್ಟುಕೊಂಡು ಮೆರೆಸುತ್ತಿದೆ’ ಎಂದು ಆರೋಪಿಸಿದ್ದಾರೆ.

ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಕೇಂದ್ರ ಬಿಜೆಪಿ ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ‌‌ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ‌ ಮತ್ತು ಸಂಸ್ಕೃತಿ ಇಲಾಖೆಯೇ? ಎನ್ನುವುದನ್ನು ಮುಖ್ಯಮಂತ್ರಿಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್‌ ಕುಮಾರ್‌ ಸ್ಪಷ್ಟಪಡಿಸಬೇಕು ಎಂದು ಟ್ವೀಟ್‌ ಮಾಡಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿಯ ರಕ್ಷಣೆ ಮತ್ತು‌ ಪೋಷಣೆಗಾಗಿ ಇರುವ ಇಲಾಖೆಯೇ ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡವನ್ನು ಹೊರಗಿಟ್ಟು ಹಿಂದಿ ಭಾಷೆಯ ಪ್ರಚಾರಕ್ಕೆ ಇಳಿದರೆ ಕನ್ನಡ ಭಾಷೆಯನ್ನು ರಕ್ಷಿಸುವವರು ಯಾರು ಎಂದು ಪ್ರಶ್ನಿಸಿದ್ದಾರೆ.

ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಕನ್ನಡಿಗರ ಸ್ವಾಭಿಮಾನವನ್ನು ‘ಉತ್ತರ ಕುಮಾರ’ರ ಕಾಲಡಿ ಯಾಕೆ ಅಡವು ಇಡುತ್ತೀರಾ? ಎಂದು ಕೇಳಿದ್ದಾರೆ.

ಶರಣಾಗತಿ ಕನ್ನಡದ ಮಣ್ಣಿನ ಗುಣವಲ್ಲ, ವೀರರಾಣಿ ಅಬ್ಬಕ್ಕನ ನೆಲದಿಂದ ಬಂದ ಕನ್ನಡ ಮತ್ತು ಸಂಸ್ಕೃತಿ ಸಚಿವರಿಗೆ ಇಂಥಾ ಗುಲಾಮಿ‌ ಮನಸ್ಥಿತಿ ಬರಬಾರದಿತ್ತು ಎಂದೂ ಸಿದ್ದರಾಮಯ್ಯ ಟ್ವೀಟಿಸಿದ್ದಾರೆ.