ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದುಪಡಿಸಿ 2019ರಲ್ಲಿ ಕೇಂದ್ರ ಸರ್ಕಾರ ಕೈಗೊಂಡಿದ್ದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳಿಗೆ ಸಂಬಂಧಿಸಿದ ತೀರ್ಪನ್ನು ಸುಪ್ರೀಂ ಕೋರ್ಟ್ ಸೋಮವಾರ (ಡಿಸೆಂಬರ್ 11) ಪ್ರಕಟಿಸಲಿದೆ.
ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿ ಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರ ನೇತೃತ್ವದ ಸಾಂವಿಧಾನಿಕ ಪೀಠವು ತೀರ್ಪು ಪ್ರಕಟಿಸಲಿದೆ.
ಸೆಪ್ಟೆಂಬರ್ 5ರಂದು ತೀರ್ಪು ಕಾಯ್ದಿರಿಸುವುದಕ್ಕೂ ಮುನ್ನ ನ್ಯಾಯಾಲಯವು 16 ದಿನ ಪ್ರಕರಣದ ವಿಚಾರಣೆ ನಡೆಸಿತ್ತು. ರಾಜ್ಯದ ಸ್ಥಾನಮಾನ ಹೊಂದಿದ್ದ ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ವಿಭಜಿಸಲು ಭಾರಿ ಬಹುಮತ ಹೊಂದಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಾಷ್ಟ್ರಪತಿ ಅವರ ಮೂಲಕ ಸರಣಿ ಕಾರ್ಯಕಾರಿ ಆದೇಶಗಳನ್ನು ಹೊರಡಿಸಿತ್ತು ಎಂದು ಹಿರಿಯ ವಕೀಲರಾದ ಕಪಿಲ್ ಸಿಬಲ್, ಗೋಪಾಲ ಸುಬ್ರಮಣಿಯಮ್, ರಾಜೀವ್ ಧವನ್, ದುಷ್ಯಂತ್ ದವೆ ಮತ್ತು ಗೋಪಾಲ್ ಶಂಕರನಾರಾಯಣನ್ ಅವರು ವಾದಿಸಿದ್ದರು. ಕೇಂದ್ರ ಸರ್ಕಾರದ ನಿರ್ಧಾರವು ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿ ಮತ್ತು ಸಂವಿಧಾನಕ್ಕೆ ಎಸಗಿದ ವಂಚನೆ ಎಂದು ವ್ಯಾಖ್ಯಾನಿಸಿದ್ದರು.