ಮೈಸೂರು: ಸರ್ಕಾರದ ಸೌಲಭ್ಯಗಳ ಮಾಹಿತಿಯನ್ನು ಜನ ಸಾಮಾನ್ಯರಿಗೆ ತಲುಪಿಸುವಲ್ಲಿ ಮಾಧ್ಯಮಗಳ ಪಾತ್ರ ಬಹಳ ಮುಖ್ಯವಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಪ್ರೊ ಎನ್ ಕೆ ಲೋಕನಾಥ್ ಅವರು ತಿಳಿಸಿದರು
ನಗರದ ಸಿದ್ದಾರ್ಥ ಹೋಟೆಲ್ ನಲ್ಲಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಪತ್ರಕರ್ತರ ಸಂಘ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮಾನಸ ಗಂಗೋತ್ರಿ, ಮೈಸೂರು ವಿಶ್ವ ವಿದ್ಯಾಲಯ ಸಹಯೋಗದಲ್ಲಿ ಮೈಸೂರು ಜಿಲ್ಲಾ ಮಾದ್ಯಮ ಪ್ರತಿನಿಧಿಗಳಿಗೆ ಹಮ್ಮಿಕೊಂಡಿದ್ದ ವಾರ್ತಾಲಾಪ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿ ಸಂವಹನ ಬಹಳ ಮುಖ್ಯ. ಸರ್ಕಾರದ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗೆ ತಲುಪಲು ಮಾದ್ಯಮಗಳ ಪಾತ್ರ ಬಹಳ ಮುಖ್ಯ. ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರದ ಸೌಲಭ್ಯಗಳ ಮಾಹಿತಿ ದೊರೆಯಬೇಕು. ಇಂತಹ ಮಾಹಿತಿ ನೀಡುವ ಕಾರ್ಯಕ್ರಮಗಳು ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ನಡೆಯಬೇಕು. ಪತ್ರಿಕೆಗಳು ಮಾಹಿತಿಗಳನ್ನು ನೀಡುವ ಕೊಂಡಿಗಳು ಆಗಿವೆ ಎಂದರು.
ಕೇಂದ್ರ ವಾರ್ತಾ ಶಾಖೆಯ ಹೆಚ್ಚುವರಿ ಮಹಾ ನಿರ್ದೇಶಕರಾದ ಎಸ್ ಜಿ ರವೀಂದ್ರ ಅವರು ಮಾತನಾಡಿ ಕೇಂದ್ರ ಸರ್ಕಾರವು ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಕೇಂದ್ರ ಸರ್ಕಾರದಲ್ಲಿ 79 ಯೋಜನೆಗಳು ಇದ್ದು ಇವುಗಳನ್ನು ಪ್ರಚಾರ ಮಾಡಲು ರಾಜ್ಯದಲ್ಲಿ 49 ವಾಹನಗಳು ಸಂಚಾರ ಮಾಡುತ್ತಿವೆ. ಬುಡಕಟ್ಟು ಜನಾಂಗಗಳ ಏಳಿಗೆಗೆ ಏಕಲವ್ಯ ಶಾಲೆಗಳನ್ನು ತೆರೆದು ಶಿಕ್ಷಣ ನೀಡಲಾಗುತ್ತಿದೆ. ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು ದೇಶದಾದ್ಯಂತ ನಡೆಯುತ್ತಿದೆ. ಡಿಸೆಂಬರ್ 09 ರಂದು ಮಾನ್ಯ ಪ್ರಧಾನ ಮಂತ್ರಿಗಳು ಕೋಲಾರ ಮತ್ತು ತುಮಕೂರಿನ ಜಿಲ್ಲೆಯ ಜನರೊಂದಿಗೆ ವರ್ಚುಯಲ್ ಸಭೆಯ ಮೂಲಕ ಸಂವಾದ ನಡೆಸುತ್ತಾರೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕುಮಾರಸ್ವಾಮಿ ಅವರು ಮಾತನಾಡಿ ಕಳೆದ ಎರಡು ವರ್ಷಗಳ ಹಿಂದೆ ಬಂದಂತಹ ಕೋವಿಡ್ ನ್ನು ಆರೋಗ್ಯ ಇಲಾಖೆ ಯಶಸ್ವಿಯಾಗಿ ಎದುರಿಸಿತು. ಪಲ್ಸ್ ಪೋಲಿಯೋ ಲಸಿಕೆ ಯನ್ನು ಯಶಸ್ವಿಯಾಗಿ ನೀಡಿ 2014 ರಲ್ಲಿ ಭಾರತವನ್ನು ಪೋಲಿಯೋ ಮುಕ್ತ ರಾಷ್ಟ್ರ ಎಂದು ಘೋಷಿಸಲಾಗಿದೆ. 2025 ಕೆ ಕುಷ್ಟ ರೋಗ ಮುಕ್ತ ಮಾಡಲು ಹಲವು ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 20 ರಾಷ್ಟ್ರೀಯ ಯೋಜನೆಗಳನ್ನು ಆರೋಗ್ಯ ಇಲಾಖೆಯಿಂದ ಕಾರ್ಯ ರೂಪಕ್ಕೆ ತರಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ 1800 ಕ್ಕೂ ಹೆಚ್ಚು ಆರೋಗ್ಯ ಕಾರ್ಯಕರ್ತೆಯರ ಮೂಲಕ ಆರೋಗ್ಯ ಇಲಾಖೆಗೆ ಸಂಬಂಧಿಸಿದ ಮಾಹಿತಿ ಹಾಗೂ ಸೇವೆಯನ್ನು ಮನೆ ಮನೆಗೆ ತೆರಳಿ ನೀಡುತ್ತಿದ್ದಾರೆ. ಅಯುಷ್ಮನ್ ಭಾರತ್ ಆರೋಗ್ಯ ಕರ್ನಾಟಕ ಆರೋಗ್ಯ ಕಾರ್ಡ್ ಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಸ್ವಪ್ನ ಅವರು ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು,ಇವು ಜನರಿಗೆ ತಲುಪಬೇಕು. ಸೌಲಭ್ಯಗಳನ್ನು ಪಡೆದ ಜನರ ಅಭಿಪ್ರಾಯಗಳನ್ನು ಮಾಧ್ಯಮಗಳು ಪ್ರಚಾರ ಮಾಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್ ಟಿ ರವಿಕುಮಾರ್ ಅವರು ಮಾತನಾಡಿ ಪತ್ರಕರ್ತರು ಬದ್ಧತೆಯಿಂದ ಕಾರ್ಯ ನಿರ್ವಹಿಸುತ್ತಿದ್ದು, ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುತ್ತಿದೆ. ಮುದ್ರಣ ಮಾಧ್ಯಮಗಳು ದಾಖಲಾತಿಯಾಗಿ ಉಳಿಯುತ್ತವೆ. ಮಾಧ್ಯಮಗಳು ಜನರು ಹಾಗೂ ಸರ್ಕಾರದ ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತಿವೆ. ಮಾಧ್ಯಮಗಳ ವರದಿಗಳಲ್ಲಿ ಮಾನವೀಯತೆಗಳನ್ನು ಒಳಗೊಂಡಿರಬೇಕು ಎಂದು ಮಾಹಿತಿ ನೀಡಿದರು.
ಹಿರಿಯ ಪತ್ರಕರ್ತರಾದ ಅಂಶಿ ಪ್ರಸನ್ನ ಕುಮಾರ್ ಅವರು ಮಾತನಾಡಿ ಪ್ರಧಾನ ಮಂತ್ರಿ ಗಳ ಜನಧನ್ ಯೋಜನೆಯ ಜಿರೋ ಬ್ಯಾಲೆನ್ಸ್ ಬ್ಯಾಂಕ್ ಖಾತೆ ಹೊಂದಿದ್ದು, ಸಹಜ ಸಾವು ಉಂಟಾದರೆ 30 ಸಾವಿರ, ಅಪಘಾತದ ಸಾವು ಆದರೆ 1 ಲಕ್ಷ ವಿಮೆ ದೊರೆಯುತ್ತದೆ. ಈ ಬಗ್ಗೆ ಮಾಹಿತಿ ನೀಡಿ ಸೌಲಭ್ಯ ದೊರೆಯುವಂತೆ ಮಾಡಿದ್ದು ಮಾಧ್ಯಮಗಳು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕರಾದ ನಾಗೇಶ್ ವಿ ಎನ್, ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆಯ ಉಪ ನಿರ್ದೇಶಕರಾದ ಶ್ರುತಿ ಸೇರಿದಂತೆ ಮಾಧ್ಯಮ ಪ್ರತಿನಿಧಿಗಳು ಭಾಗವಹಿಸಿದ್ದರು.