ಬೆಳಗಾವಿ: ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಮಹಿಳೆಗೆ ರಾಜ್ಯ ಸರಕಾರದ ವತಿಯಿಂದ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಶುಕ್ರವಾರ ಹೇಳಿಕೆ ನೀಡಿದ್ದಾರೆ.
ನೊಂದ ಮಹಿಳೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದಲೂ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.
ಡಿಸೆಂಬರ್ 11 ರಂದು ಬೆಳಗಾವಿಯ ವಂಟಮುರಿ ಗ್ರಾಮದಲ್ಲಿ ಹುಡುಗಿಯೊಂದಿಗೆ ಮಗ ಓಡಿಹೋದ ನಂತರ ಮಹಿಳೆಯ ಮೇಲೆ ಹಲ್ಲೆ ನಡೆಸಿ ವಿವಸ್ತ್ರವಾಗಿ ಮೆರವಣಿಗೆ ನಡೆಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಎಂಟು ಜನರನ್ನು ಬಂಧಿಸಲಾಗಿದೆ ಮತ್ತು ಇತರ ಎಂಟು ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಕರ್ನಾಟಕ ಹೈಕೋರ್ಟ್ ವಿಷಯವನ್ನು ಕೈಗೆತ್ತಿಕೊಂಡಿದೆ.