ಬೆಂಗಳೂರು(Bengaluru): 2021- 2022ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಪಡೆದರೆ, ವಿಜಯಪುರ ಮೂರನೇ ಸ್ಥಾನ ಪಡೆದಿದೆ. ಚಿತ್ರದುರ್ಗ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಮಲ್ಲೇಶ್ವರಂನಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು.
ಪರೀಕ್ಷೆಗೆ 6,83,563 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 4,22,966 (ಶೇ 61.88) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಶೇ 88.02 ರಷ್ಟು ವಿದ್ಯಾರ್ಥಿಗಳು, ಉಡುಪಿ ಜಿಲ್ಲೆಯ ಶೇ 86.38ರಷ್ಟು ವಿದ್ಯಾರ್ಥಿಗಳು ಹಾಗೂ ವಿಜಯಪುರ ಜಿಲ್ಲೆಯ ಶೇ 77.14ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿಜ್ಞಾನ ವಿಭಾಗದ ಶೇ 72.53ರಷ್ಟು ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದ ಶೇ 64.97ರಷ್ಟು ವಿದ್ಯಾರ್ಥಿಗಳು ಹಾಗೂ ಕಲಾ ವಿಭಾಗದಲ್ಲಿ ಶೇ 48.71ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಈ ಬಾರಿ ಯಾವುದೇ ಪದವಿಪೂರ್ವ ಕಾಲೇಜಿನಲ್ಲಿ ಶೂನ್ಯ ಫಲಿತಾಂಶ ದಾಖಲಾಗಿಲ್ಲ.