ಬೆಂಗಳೂರು: ಮುಂದಿನ ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದು ಸಮಾಲೋಚನೆ ನಡೆಸಲಾಗುವುದು. ಎಲ್ಲ ಶಾಸಕರ ಜೊತೆ ಚರ್ಚೆ ನಡೆಸಿ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲಾಗುವುದು ಎಂದು ಪಕ್ಷದ ರಾಜ್ಯ ಘಟಕದ ನೂತನ ಅಧ್ಯಕ್ಷ ಬಿ.ವೈ ವಿಜಯೇಂದ್ರ ಶುಕ್ರವಾರ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಸಕಾಂಗ ಪಕ್ಷದ ಸಭೆಗೆ ಕೇಂದ್ರದ ವೀಕ್ಷಕರು ಕೂಡ ಆಗಮಿಸುತ್ತಿದ್ದಾರೆ. ಅವರ ಸಮ್ಮುಖದಲ್ಲೇ ಪ್ರತಿ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆಯಾಗಲಿದೆ ಎಂದು ತಿಳಿಸಿದರು.
ರಾಜ್ಯಾಧ್ಯಕ್ಷ ಹುದ್ದೆಗೆ ಆಯ್ಕೆಯಾದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಾಜಿ ಸಿಎಂ ಯಡಿಯೂರಪ್ಪ ಮಗ ಎನ್ನುವ ಕಾರಣಕ್ಕೆ ನನಗೆ ಹುದ್ದೆ ಕೊಟ್ಟಿಲ್ಲ. ಅವರ ಮಗ ಎನ್ನುವ ಹೆಮ್ಮೆ ಇದೆ. ಪಕ್ಷ ಬಿಡುವ ಯೋಚನೆಯಲ್ಲಿ ಇರುವವರನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇನೆ ಎಂದು ಹೇಳಿದರು.
ಮಾಜಿ ಸಚಿವ ವಿ. ಸೋಮಣ್ಣ, ಆರ್ ಅಶೋಕ್, ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ ಎಂದು ಅವರು ಹೇಳಿದರು.