ಬೆಂಗಳೂರು:16ನೇ ವಿಧಾನಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದೆ.
ಹಂಗಾಮಿ ಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ನ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರು ನೂತನ ಶಾಸಕರಿಗೆ ಪ್ರಮಾಣವಚನ ಭೋದಿಸಿದರು.
ಮೊದಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭೆ ಕ್ಷೇತ್ರದ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು. ನಂತರ ಉಪ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕನಕಪುರ ಕ್ಷೇತ್ರದ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು.
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಜೊತೆ ಸಚಿವರಾಗಿರುವ ಡಾ. ಜಿ. ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ.ಪಾಟೀಲ, ಪ್ರಿಯಾಂಕ್ ಖರ್ಗೆ ಪ್ರಮಾಣವಚನ ಸ್ವೀಕರಿಸಿದರು. ಸಿದ್ದರಾಮಯ್ಯ ನೇತೃತ್ವದ ನೂತನ ಸರ್ಕಾರದ ಮೊದಲ ಅಧಿವೇಶನ ಇದಾಗಿದೆ.
ಸದನದಿಂದ ಸಭಾಧ್ಯಕ್ಷರು ಆಯ್ಕೆ ಆಗುವವರೆಗೆ ವಿಧಾನಸಭಾಧ್ಯಕ್ಷರ ಕರ್ತವ್ಯವನ್ನು ನಿರ್ವಹಿಸಲು ದೇಶಪಾಂಡೆ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ತಿಳಿಸಿದ್ದಾರೆ.