ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ದೂರುದಾರೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ಇವರು ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮಾಡಿ ಇತ್ತೀಚೆಗೆ ದೂರು ನೀಡಿದ್ದರು. ಅದರಂತೆ, ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ದೂರುದಾರೆಯು ಕಳೆದ ಕೆಲವು ವರ್ಷಗಳಿಂದ ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದರು.
ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ, ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದ ಯಡಿಯೂರಪ್ಪ, ನ್ಯಾಯ ಕೊಡಿಸಿ ಎಂದು ತಾಯಿ-ಮಗಳು ಹಲವು ಸಲ ನನ್ನ ಬಳಿ ಬಂದಿದ್ದರು. ಅನ್ಯಾಯ ಆಗಿದೆ ಎಂದು ನನ್ನ ಬಳಿ ಬಂದಿದ್ದರು. ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದರು. ಅದಾದ ಮೇಲೆ ನನ್ನ ವಿರುದ್ಧ ಏನೇನೋ ಆರೋಪ ಮಾಡಿದರು. ಬಳಿಕ ಅವರನ್ನು ಪೊಲೀಸ್ ಕಮಿಷನರ್ ಬಳಿ ಕಳಿಸಿಕೊಟ್ಟಿದ್ದೆ ಎಂದು ಹೇಳಿದ್ದರು.