ಮನೆ ರಾಜಕೀಯ ಮತಾಂತರ ನಿಷೇಧ ಕಾಯ್ದೆ ಜಾರಿ ಸುಗ್ರೀವಾಜ್ಞೆ ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಸಿದ್ಧರಾಮಯ್ಯ ಮನವಿ

ಮತಾಂತರ ನಿಷೇಧ ಕಾಯ್ದೆ ಜಾರಿ ಸುಗ್ರೀವಾಜ್ಞೆ ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಸಿದ್ಧರಾಮಯ್ಯ ಮನವಿ

0

ಬೆಂಗಳೂರು(Bengaluru):  ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿಪಕ್ಷ ನಾಯಕ ಸಿದ್ಧರಾಮಯ್ಯ ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಸಿಎಂ ಸಿದ‍್ಧರಾಮಯ್ಯ, ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ನಿತ್ಯ ಬೆತ್ತಲೆ ಆಗುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ ಧಾರ್ಮಿಕ ಭಾವನೆ ಕೆರಳಿಸಿ ಜನರ ಗಮನ ಬೇರೆಡೆ ಸೆಳೆಯುವ ದುರುದ್ದೇಶದಿಂದ ಸುಗ್ರಿವಾಜ್ಞೆ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಗೊಳಿಸಲು ಹೊರಟಿದೆ. ಅಲ್ಪಸಂಖ್ಯಾತ ಸಮುದಾಯವನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶದ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಬೇಕೆಂದು ರಾಜ್ಯದ ಘನತೆವೆತ್ತ ರಾಜ್ಯಪಾಲರಿಗೆ ಮನವಿ ಮಾಡುತ್ತಿದ್ದೇನೆ ಎಂದಿದ್ದಾರೆ.

ಆಮಿಷ,ಒತ್ತಡ, ಬೆದರಿಕೆಗಳ ಮೂಲಕ ನಡೆಯುವ ಬಲತ್ಕಾರದ ಮತಾಂತರಗಳನ್ನು ತಡೆಯಲು ನಮ್ಮ ಕಾನೂನು ಸಶಕ್ತವಾಗಿದೆ. ಹೀಗಿದ್ದಾಗ ಹೊಸ ಕಾಯ್ದೆಯ ಅವಶ್ಯಕತೆ ಏನಿದೆ? ಅಲ್ಪಸಂಖ್ಯಾತರನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶವಲ್ಲದೆ ಈ ಕಾಯ್ದೆಗೆ ಬೇರೆ ಸದುದ್ದೇಶಗಳೇನಿದೆ? ಎಂದು ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಚಾಟಿ ಬೀಸಿದ್ದಾರೆ.

ಸಹಬಾಳ್ವೆ-ಸೌಹಾರ್ದತಾ ಪರಂಪರೆಯ ಹಿಂದೂ ಧರ್ಮದ ನೈಜ ಅನುಯಾಯಿಗಳು ಯಾರೂ ಇಂತಹದ್ದೊಂದು ಅನಗತ್ಯ ಕಾಯ್ದೆಗೆ ಒತ್ತಾಯಿಸಿಲ್ಲ, ಇದನ್ನು ಒಪ್ಪುವುದೂ ಇಲ್ಲ. ಇದು ಸಂಘ ಪರಿವಾರದ ರಾಜಕೀಯ ಹಿಂದುತ್ವದ ಅಜೆಂಡಾ ಆಗಿದೆ. ಇದನ್ನು ಸಹೃದಯ ಹಿಂದು ಬಾಂಧವರೆಲ್ಲರೂ ಖಂಡಿಸಬೇಕು ಎಂದು ಸಿದ್ಧರಾಮಯ್ಯ ಖಂಡಿಸಿದ್ದಾರೆ.

ಹಿಂದಿನ ಲೇಖನಹಳೆಯ ವಾಹನಗಳ ಬಳಕೆಗೆ ಹೆಚ್ಚುವರಿ ಶುಲ್ಕ: ಹೈಕೋರ್ಟ್ ಮಧ್ಯಂತರ ತಡೆ
ಮುಂದಿನ ಲೇಖನಮೇ. 16 ರಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಪುನಾರಂಭ