ಮೈಸೂರು(Mysuru): ರಂಗಾಯಣದಲ್ಲಿ ಇತ್ತೀಚಿಗೆ ಪ್ರದರ್ಶನಗೊಂಡ ‘ಸಾಂಬಶಿವ ಪ್ರಹಸನ’ ನಾಟಕದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಅವಹೇಳನ ಮಾಡಿರುವುದನ್ನು ಖಂಡಿಸಿ ಜ.10ರಂದು ಬೃಹತ್ ಪ್ರತಿಭಟನೆ ನಡೆಸಲು ಸ್ವಾಭಿಮಾನಿ ಹೋರಾಟ ಸಮಿತಿ ನಿರ್ಣಯಿಸಿತು.
ಶನಿವಾರ ಪುರಭವನದಲ್ಲಿ ನಡೆದ ಮುಖಂಡರ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಅಂದು ಬೆಳಿಗ್ಗೆ 10ಕ್ಕೆ ನಗರದ ಓವಲ್ ಮೈದಾನದಲ್ಲಿ ಸಮಾವೇಶಗೊಂಡು, ಖಂಡನಾ ಸಭೆ ನಡೆಸಿ ಬಳಿಕ ರಂಗಾಯಣಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.
ಪಕ್ಷಾತೀತವಾಗಿ ನಡೆಯುವ ಈ ಹೋರಾಟದಲ್ಲಿ ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಿಂದ 10ಸಾವಿರಕ್ಕೂ ಹೆಚ್ಚಿನ ಜನರನ್ನು ಸೇರಿಸಬೇಕು ಮತ್ತು ಪ್ರಗತಿಪರ ಚಿಂತಕರು, ಸಾಹಿತಿಗಳು ಹಾಗೂ ವಿವಿಧ ಸಮಾಜಗಳ ಮುಖಂಡರನ್ನು ಆಹ್ವಾನಿಸಲು ತೀರ್ಮಾನಿಸಲಾಯಿತು.
ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ನಡೆಯು ಕೋಮುಸಂಘರ್ಷಕ್ಕೆ ಕಾರಣವಾಗುತ್ತಿದೆ. ಸರ್ಕಾರದ ಸಂಸ್ಥೆಯಾದ ರಂಗಾಯಣವನ್ನು ತಮ್ಮ ದುರುದ್ದೇಶಕ್ಕೆ, ಬಿಜೆಪಿ ಹಾಗೂ ಆರ್‌ಎಸ್‌ಎಸ್ ರಹಸ್ಯ ಕಾರ್ಯಸೂಚಿಗಳ ಜಾರಿಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಬಿ.ಸುಬ್ರಹ್ಮಣ್ಯ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್, ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು, ಪೌರಕಾರ್ಮಿಕರ ಸಂಘದ ಅಧ್ಯಕ್ಷ ನಾರಾಯಣ, ಕುರುಬರ ಸಂಘ ಮಂಡ್ಯ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್, ಮುಖಂಡರಾದ ವಾಸು, ಹರೀಶ್ ಗೌಡ, ಎಂ.ಶಿವಣ್ಣ, ಮಂಜುಳಾ ಮಾಸನ, ಪುಷ್ಪಲತಾ ಚಿಕ್ಕಣ್ಣ, ಲತಾ ಸಿದ್ದಶೆಟ್ಟಿ ಪಾಲ್ಗೊಂಡಿದ್ದರು.