ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ವಿವಾದಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆ ಹಾವು ಸಾಯಲಿಲ್ಲ, ಕೋಲು ಮುರಿಯಲಿಲ್ಲ’ ಎಂಬಂತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ.
ಕೆಪಿಎಸ್‌ಸಿ ನಡೆಸಿದ ಪ್ರಾಥಮಿಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳ ಭಾಷಾಂತರದಲ್ಲಿ ಲೋಪ ಎಸಗಿರುವವರನ್ನು ಕಪ್ಪುಪಟ್ಟಿಗೆ ಸೇರಿಸಿ, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ನಿನ್ನೆ (ಬುಧವಾರ) ಹೇಳಿದ್ದರು.
ಈ ಕುರಿತು ಸಾಮಾಜಿಕ ಜಾಲತಾಣಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ನಾರಾಯಣಗೌಡ, `ಮುಖ್ಯಮಂತ್ರಿಗಳು ತಮ್ಮ ಮೇಲಿನ ಭಾರವನ್ನು ನ್ಯಾಯಾಲಯಕ್ಕೆ ಹೊರಿಸುವ ಮೂಲಕ ತಮ್ಮ ಜವಾಬ್ದಾರಿಯಿಂದ ನುಣುಚಿಕೊಂಡಿದ್ದಾರೆ. ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯ ಅವರಿಗೆ ಚೆನ್ನಾಗಿ ಗೊತ್ತಿದೆ. ಆದರೆ, ಅವರು ಮರು ಅಧಿಸೂಚನೆ ಹೊರಡಿಸಲು ಹಿಂಜರಿಯುತ್ತಿದ್ದಾರೆ. ಇದಕ್ಕೆ ಕಾರಣ ಅವರ ಸುತ್ತ ಇರುವ ಅಧಿಕಾರಶಾಹಿಯ ಲಾಬಿ’ ಎಂದು ಆರೋಪಿಸಿದ್ದಾರೆ.














