ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು ಜ್ವರ ಹಿನ್ನೆಲೆಯಲ್ಲಿ ನಿನ್ನೆ(ಜೂನ್ 20) ರಾತ್ರಿ 11.30ಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರ ನವದೆಹಲಿ ಪ್ರವಾಸದ ಸಮಯ ಬದಲಾವಣೆಯಾಗಿದೆ.
ಸಿದ್ದರಾಮಯ್ಯ ಅವರು ಇಂದು(ಜೂನ್ 21) ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಬೇಕಿತ್ತು. ಆದ್ರೆ, ಪತ್ನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ. ಹೀಗಾಗಿ ಬೆಳಗ್ಗೆ 11.30 ಗೆ ಹೆಚ್ಎಎಲ್ ನಿಲ್ದಾಣದಿಂದ ವಿಶೇಷ ವಿಮಾನ ಮೂಲಕ ದೆಹಲಿಗೆ ತೆರಳಲಿದ್ದಾರೆ.
ಇಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಸರ್ಕಾರದ ಸಚಿವರ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಸಿದ್ದರಾಮಯ್ಯ ಅವರು ಪಾಲ್ಗೊಳ್ಳಲು ದೆಹಲಿಗೆ ತೆರಳಲಿದ್ದಾರೆ. ಸಭೆಗೂ ಮುನ್ನ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ವಿವಿಧ ಕೇಂದ್ರ ನಾಯಕರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಅಲ್ಲದೇ ಸಂಜೆ ರಾಷ್ಟ್ರಪತಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ಖರೀದಿ ವಿಚಾರವಾಗಿ ರಾಜ್ಯ ಸರ್ಕಾರ ಮತ್ತು ಬಿಜೆಪಿ ನಾಯಕರ ಮಧ್ಯೆ ವಾಕ್ಸಮರ ಮುಂದುವರಿದಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗುತ್ತಿರುವುದು ಕುತೂಹಲ ಮೂಡಿಸಿದೆ.
ಇದೇ ಸಂದರ್ಭದಲ್ಲಿ ಆಹಾರ ಸಚಿವ ಮುನಿಯಪ್ಪ ಕೂಡ ಕೇಂದ್ರ ಆಹಾರ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ರಾಜ್ಯಕ್ಕೆ ಅಕ್ಕಿ ಪೂರೈಸುವಂತೆ ಮುನಿಯಪ್ಪ ಮನವಿ ಮಾಡಲಿದ್ದಾರೆ.