ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೈಸೂರಿನ ಟಿ.ಕೆ. ಬಡಾವಣೆಯಲ್ಲಿರುವ ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ಈ ವೇಳೆ ರೈತ ಸಂಘಟನೆಗಳ ಒಕ್ಕೂಟ, ಕಬ್ಬು ಬೆಳೆಗಾರರು ಹಸಿರು ಶಾಲು ಹಿಡಿದು ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಪೊಲೀಸರು ರೈತರನ್ನು ವಶಕ್ಕೆ ಪಡೆದಿದ್ದಾರೆ. ರೈತ ಮುಖಂಡ ಕುರುಬೂರು ಶಾಂತಕುಮಾರ್ ಸೇರಿ 50ಕ್ಕೂ ಹೆಚ್ಚು ರೈತರನ್ನು ವಶಕ್ಕೆ ಪಡೆಯಲಾಗಿದೆ.
ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ದಮನ ಎಂದು ರೈತರು ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.
ಸಿಎಂ ನಿವಾಸದ ಬಳಿ ಬಿಗಿ ಭದ್ರತೆ
ಸಿದ್ದರಾಮಯ್ಯ ನಿವಾಸದ ಬಳಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ. ನಿವಾಸಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲೂ ಮುನ್ನೆಚ್ಚರಿಕೆಯಾಗಿ ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ.