ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಐತಿಹಾಸಿಕ ಐಪಿಎಲ್ ಗೆಲುವನ್ನು ಆಚರಿಸಲು ಜಮಾಯಿಸಿದ್ದ ಸಾವಿರಾರು ಅಭಿಮಾನಿಗಳ ಸಂಭ್ರಮ, ಆಘಾತದಲ್ಲಿ ಕೊನೆಗೊಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ವಿಜಯೋತ್ಸವದ ವೇಳೆ ಉಂಟಾದ ಭೀಕರ ಕಾಲ್ತುಳಿತದಿಂದ 11 ಮಂದಿ ಅಭಿಮಾನಿಗಳು ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಈ ದುರಂತಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ (ಹಳೆಯ ಟ್ವಿಟರ್) ಅವರು ತಮ್ಮ ಸಹಾನುಭೂತಿಯ ಸಂದೇಶವನ್ನು ಹಂಚಿಕೊಂಡಿದ್ದು, “ಬೆಂಗಳೂರು ಕಾಲ್ತುಳಿತದ ಸುದ್ದಿ ತುಂಬಾ ಹೃದಯವಿದ್ರಾವಕವಾಗಿದೆ. ಈ ದುರ್ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಅವರ ಬಗ್ಗೆ ಕನಿಕರವಿದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.
ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆ ಹಾಗೂ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಹಲವರ ಸ್ಥಿತಿ ಚಿಂತಾಜನಕವಾಗಿದೆ.
ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಲಾ ₹10 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.














