ಕೊಪ್ಪಳ(Koppala): ರಾಜ್ಯ ಸರ್ಕಾರ ಭ್ರಷ್ಟಾಚಾರವನ್ನು ತಡೆಗಟ್ಟಬೇಕು. ಇಲ್ಲವಾದರೆ ಸಂಘದಿಂದ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದು ಕೊಪ್ಪಳ ಜಿಲ್ಲಾ ಗುತ್ತಿಗೆದಾರರ ಸಂಘದ ಸದಸ್ಯರು ಎಚ್ಚರಿಕೆ ನೀಡಿದ್ದಾರೆ.
ಶನಿವಾರ ಸುದ್ದಿಗೋಷ್ಠಿ ನಡೆಸಿದ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವಪ್ಪ ಅರಕೇರಿ, ರಾಜ್ಯ ಸರ್ಕಾರವು ವಿವಿಧ ಕಾಮಗಾರಿಗಳಲ್ಲಿ ಗುತ್ತಿಗೆದಾರರಿಂದ ಶೇ 40ರಷ್ಟು ಲಂಚ ಪಡೆಯುತ್ತಿದೆ ಎಂದು ನಮ್ಮ ಸಂಘದ ಅಧ್ಯಕ್ಷರು ಹೇಳಿರುವುದು ಸತ್ಯವಿದೆ. ಈಗಿನ ಪರಿಸ್ಥಿತಿಯಲ್ಲಿ ಲಂಚ ನಿರ್ನಾಮ ಅಸಾಧ್ಯವಾದರೂ ಪ್ರಮಾಣ ಕಡಿಮೆ ಮಾಡಬೇಕು ಎನ್ನುವ ಕಾರಣಕ್ಕೆ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.
ರಾಜ್ಯದ ಪ್ರತಿ ಜಿಲ್ಲೆಗಳಲ್ಲಿಯೂ ಭ್ರಷ್ಟಾಚಾರ ನಡೆಯುತ್ತಲೇ ಇದೆ. ಇದಕ್ಕೆ ಸಾಕ್ಷಿ ಸಿಗುವುದಿಲ್ಲ. ಇದೇ ವೃತ್ತಿಯನ್ನು ನಂಬಿಕೊಂಡು ಬದುಕುತ್ತಿರುವವರು ಸಾಕ್ಷಿಗಳನ್ನು ಸಂಗ್ರಹಿಸುವ ಹಂತಕ್ಕೆ ಹೋಗುವುದಿಲ್ಲ. ನಮ್ಮ ಆರೋಪವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.
ರಾಜ್ಯದ ಕೆಲ ಶಾಸಕರು ಹಾಗೂ ಸಚಿವರು ಈ ವಿಚಾರದಲ್ಲಿ ಅನಗತ್ಯವಾಗಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಅವರನ್ನು ಆದಷ್ಟು ಬೇಗನೆ ಮಾನಸಿಕ ಆಸ್ಪತ್ರೆಗೆ ಸೇರಿಸುವುದು ಸೂಕ್ತ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿಕೆಗೆ ದೇವಪ್ಪ ಅರಕೇರಿ ತಿರುಗೇಟು ನೀಡಿದರು.
ಜಿಲ್ಲಾ ಸಂಘದ ಕಾರ್ಯಕಾರಿ ಮಂಡಳಿ ಸದಸ್ಯರಾದ ರಾಮಣ್ಣ ಕಲ್ಲಣ್ಣವರ, ದ್ಯಾಮಣ್ಣ ಪೂಜಾರ, ಟಿ. ರತ್ನಾಕರ ಪಾಲ್ಗೊಂಡಿದ್ದರು.