ಮನೆ ಸುದ್ದಿ ಜಾಲ ಮೈಸೂರಿನಲ್ಲಿ ಮಾದಕ ವಸ್ತು ಮಾರಾಟ ಹಾಗೂ ಮದ್ಯಪಾನ ಮಾಡಿ ವಾಹನ ಚಾಲನೆ ತಡೆಗೆ ಕಠಿಣ ಕ್ರಮ...

ಮೈಸೂರಿನಲ್ಲಿ ಮಾದಕ ವಸ್ತು ಮಾರಾಟ ಹಾಗೂ ಮದ್ಯಪಾನ ಮಾಡಿ ವಾಹನ ಚಾಲನೆ ತಡೆಗೆ ಕಠಿಣ ಕ್ರಮ ಅಗತ್ಯ: ಡಾ. ಕೆ. ಶಿವಕುಮಾರ್

0

ಮೈಸೂರು: ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ವಿಧಾನ ಮಂಡಲ ಅಧೀನ ಶಾಸನ ರಚನಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಕೆ. ಶಿವಕುಮಾರ್ ಅವರು ನಗರದಲ್ಲಿ ಹೆಚ್ಚುತ್ತಿರುವ ಮಾದಕ ವಸ್ತುಗಳ ಬಳಕೆ ಮತ್ತು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಪ್ರಕರಣಗಳ ಕುರಿತು ಗಂಭೀರ ಕಳವಳ ವ್ಯಕ್ತಪಡಿಸಿದರು.

ಮೈಸೂರು ರಾಜ್ಯದ ಪ್ರಮುಖ ಪ್ರವಾಸಿ ಕೇಂದ್ರವಾಗಿರುವುದರಿಂದ ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರು ನಗರಕ್ಕೆ ಆಗಮಿಸುತ್ತಾರೆ. ರಸ್ತೆ ಬದಿಯಲ್ಲಿ ಕಾರ್ಯನಿರ್ವಹಿಸುವ ಕೆಲವು ಮೊಬೈಲ್ ಕ್ಯಾಂಟೀನ್‌ಗಳ ಮೂಲಕ ಗಾಂಜಾ ಸೇರಿದಂತೆ ವಿವಿಧ ಮಾದಕ ವಸ್ತುಗಳ ಮಾರಾಟ ನಡೆಯುವ ಸಾಧ್ಯತೆಗಳಿರುವುದರಿಂದ ಪೊಲೀಸ್ ಇಲಾಖೆ ವಿಶೇಷ ನಿಗಾ ವಹಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ನಗರದಲ್ಲಿ ಮಾದಕ ವಸ್ತುಗಳ ಜಾಲ ವಿಸ್ತರಿಸುತ್ತಿರುವ ಲಕ್ಷಣಗಳು ಗೋಚರಿಸುತ್ತಿದ್ದು, ಇತ್ತೀಚೆಗೆ ಹೊರರಾಜ್ಯದ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಪರಿಸ್ಥಿತಿಯ ಗಂಭೀರತೆಯನ್ನು ಸೂಚಿಸುತ್ತದೆ ಎಂದು ಅವರು ಹೇಳಿದರು.

ಇದೇ ವೇಳೆ, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಹೊರವರ್ತುಲ ರಸ್ತೆಯಲ್ಲಿರುವ ಕ್ಲಬ್‌ಗಳು ಹಾಗೂ ಮದ್ಯ ಮಾರಾಟ ಮಳಿಗೆಗಳ ಸುತ್ತಮುತ್ತ ಪ್ರತಿದಿನ ಕಟ್ಟುನಿಟ್ಟಿನ ತಪಾಸಣೆ ನಡೆಸಬೇಕು ಎಂದು ಸಲಹೆ ನೀಡಿದರು.

ಈ ರೀತಿಯ ನಿರಂತರ ತಪಾಸಣೆ ಮತ್ತು ಕಾನೂನು ಕ್ರಮಗಳಿಂದ ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ ಎಂದು ಡಾ. ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು.