ನವದೆಹಲಿ (New Delhi)- ಹಿಜಾಬ್ ನಿಷೇಧ (hijab ban) ಆದೇಶದ ವಿರುದ್ಧ ಸಲ್ಲಿಕೆಯಾಗಿರುವ ಮೇಲ್ಮನವಿಗಳನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ಸಮ್ಮತಿಸಿದೆ.
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ವಿವಾದ ಸಂಬಂಧ ಈ ಹಿಂದೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಸಲ್ಲಿಸಲಾದ ಮೇಲ್ಮನವಿಯನ್ನು ಇಂದು ನ್ಯಾಯಮೂರ್ತಿ ಎನ್.ವಿ.ರಮಣ ಅವರ ಮುಂದೆ ಪ್ರಸ್ತಾಪಿಸಲಾಯಿತು. ಮೇಲ್ಮನವಿದಾರರ ಪರವಾಗಿ ಹಿರಿಯ ವಕೀಲರಾದ ಮೀನಾಕ್ಷಿ ಅರೋರಾ ಈ ವಿಷಯವನ್ನು ಪ್ರಸ್ತಾಪಿಸಿದರು.
ಹಿಜಾಬ್ ಕುರಿತ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿಗಳನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಮಾರ್ಚ್ ತಿಂಗಳಲ್ಲಿ ನಿರಾಕರಿಸಿತ್ತು. ಇದೀಗ ಮೇಲ್ಮನವಿಗಳನ್ನು ವಿಚಾರಣೆ ನಡೆಸಲು ಸುಪ್ರೀಂ ಸಮ್ಮತಿಸಿದೆ.
ನ್ಯಾಯಮೂರ್ತಿಗಳು ನಾವು ಅರ್ಜಿಯನ್ನು ಪರಿಗಣಿಸುತ್ತೇವೆ. ಎರಡು ದಿನ ಕಾಲ ಕಾಯುವಂತೆ ಅವರು ಹೇಳಿದ್ದಾಗಿ ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.
ಶಾಲಾ-ಕಾಲೇಜುಗಳ ಸಮವಸ್ತ್ರದ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ದೇಶಿಸುವ ಕರ್ನಾಟಕ ಸರ್ಕಾರದ ಆದೇಶವನ್ನು ಈ ಹಿಂದೆ ಹೈಕೋರ್ಟ್ ಎತ್ತಿ ಹಿಡಿದಿತ್ತು. ನ್ಯಾಯಾಲಯದ ಈ ಆದೇಶದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕೆಲವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.