ಮನೆ ರಾಷ್ಟ್ರೀಯ ವಕ್ಫ್ ತಿದ್ದುಪಡಿ ಕಾಯ್ದೆಯ ಕೆಲ ಅಂಶಗಳಿಗೆ ಸುಪ್ರೀಂ ತಡೆ..!

ವಕ್ಫ್ ತಿದ್ದುಪಡಿ ಕಾಯ್ದೆಯ ಕೆಲ ಅಂಶಗಳಿಗೆ ಸುಪ್ರೀಂ ತಡೆ..!

0

ನವದೆಹಲಿ : ವಕ್ಫ್ (ತಿದ್ದುಪಡಿ) ಕಾಯ್ದೆಯ ಕೆಲವೊಂದು ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ. ಕೆಲ ಅಂಶಗಳ ಬದಲಾವಣೆಗೆ ಸೂಚಿಸಿರುವ ಕೋರ್ಟ್‌, ಸಂಪೂರ್ಣವಾಗಿ ಕಾಯ್ದೆಗೆ ತಡೆ ನೀಡಲು ಸಾರಾಸಗಟಾಗಿ ನಿರಾಕರಿಸಿದೆ.

ವಕ್ಫ್ ಕಾಯ್ದೆಯ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿಗಳನ್ನು ಸಲ್ಲಿಸಲಾಗಿತ್ತು. ಆ ಅರ್ಜಿಗಳಲ್ಲಿ, ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ತೀವ್ರ ವಿರೋಧದ ನಡುವೆಯೂ ಜಾರಿಗೊಳಿಸಿದೆ. ಹಾಗಾಗಿ, ತಿದ್ದುಪಡಿ ಕಾಯ್ದೆಗೆ ತಡೆಯಾಜ್ಞೆ ನೀಡಬೇಕೆಂದು ಮನವಿ ಸಲ್ಲಿಸಲಾಗಿತ್ತು. ಆ ಎಲ್ಲಾ ಅರ್ಜಿಗಳ ವಿಚಾರಣೆಯನ್ನು ನಡೆಸಿದ ಸುಪ್ರೀಂ ಕೋರ್ಟ್, ಸಂಪೂರ್ಣ ಕಾಯ್ದೆಗೆ ತಡೆ ನೀಡಲು ನಿರಾಕರಿಸಿದೆ. ಆದರೆ, ಕಾನೂನಿನ ಕೆಲವು ನಿಬಂಧನೆಗಳಿಗೆ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ ಮಸಿಹ್ ಇದ್ದ ಪೀಠವು ಮಧ್ಯಂತರ ಆದೇಶ ಹೊರಡಿಸಿದೆ.

ವಕ್ಫ್‌ ಕಾಯ್ದೆ ತಿದ್ದುಪಡಿ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ಸಾಲಿಸಿಟ‌ರ್ ಜನರಲ್‌ ತುಷಾರ್ ಮೆಹ್ತಾ ವಾದ ಮಂಡಿಸಿದ್ರೆ, ಮೂರು ವಿಚಾರಗಳಿಗೆ ಅರ್ಜಿದಾರರು ತಡೆಕೋರಿ ಸಲ್ಲಿಸಿದ್ದ ಅರ್ಜಿದಾರರ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದರು.

ಯಾವುದೇ ಒಬ್ಬ ವ್ಯಕ್ತಿ ವಕ್ಫ್‌ ಮಂಡಳಿಯ ಸದಸ್ಯರಾಗಲು ಅಥವಾ ವಕ್ಫ್ ಮಂಡಳಿಗಳಿಗೆ ಭೂಮಿ ದಾನ ಕೊಡಲು ಕನಿಷ್ಠ 5 ವರ್ಷ‌ ಇಸ್ಲಾಂ ಧರ್ಮ ಅನುಸರಿಸಬೇಕೆಂಬ ಷರತ್ತು ವಿಧಿಸಲಾಗಿತ್ತು. ಇದಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. ಈ ಅಂಶದ ಬಗ್ಗೆ ರಾಜ್ಯ ಸರ್ಕಾರಗಳು ಹೊಸ ನಿಯಮಗಳನ್ನು ರೂಪಿಸುವವರೆಗೂ ತಡೆ ನೀಡಬೇಕು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.