ಮೈಸೂರು :ಮೈಸೂರು ತಾಲೂಕಿನ ಕೆ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿ, 90 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಬುಧವಾರ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೆ. ಸಾಲುಂಡಿ ಗ್ರಾಮದ ಸರಕಾರಿ ಶಾಲೆಯಲ್ಲಿ ತೆರೆದಿರುವ ತಾತ್ಕಾಲಿಕ ವೈದ್ಯಕೀಯ ಕ್ಯಾಂಪ್ ಗೆ ಭೇಟಿ ನೀಡಿ ಪರಿಶೀಲಿಸಿದರು. ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಿ.ಸಿ. ಕುಮಾರಸ್ವಾಮಿ ಅವರಿಂದ ಮಾಹಿತಿ ಪಡೆದುಕೊಂಡರು.
ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದ ಯುವಕ ಕನಕರಾಜು ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಶಾಸಕ ಕೆ. ಹರೀಶ್ ಗೌಡ, ಮೂಡಾದ ಅಧ್ಯಕ್ಷ ಕೆ ಮರೀಗೌಡ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಮಹದೇವಪ್ಪ, ಗ್ರಾಮದ ಜನರಲ್ಲಿ ಕಾಲರಾ ಲಕ್ಷಣಗಳು ಕಾಣಿಸಿಕೊಂಡಿವೆ. ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಗೆ ಚರಂಡಿ ನೀರು ಸೇರಿದ ಪರಿಣಾಮ ನೀರು ಕಲುಷಿತಗೊಂಡಿದೆ.ಇದರಿಂದ ಗ್ರಾಮಸ್ಥರಲ್ಲಿ ವಾಂತಿ ಭೇದಿ ಕಾಣಿಸಿಕೊಂಡು ಸುಮಾರು 95 ಮಂದಿ ಅಸ್ವಸ್ಥರಾಗಿದ್ದಾರೆ.ಈ ಪೈಕಿ ಓರ್ವ ಯುವಕ ಸಾವನ್ನಪ್ಪಿದ್ದಾನೆ.ಮೃತ ಯುವಕನ ಕುಟುಂಬಕ್ಕೆ ಸರ್ಕಾರದ ವತಿಯಿಂದ ಎರಡು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದರು.
ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರದಿ ನೀಡುವಂತೆ ಕೇಳಿದ್ದಾರೆ. ವರದಿ ಬಂದನಂತರ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು.ಶುದ್ಧ ಕುಡಿಯುವ ನೀರು ಪೂರೈಕೆಗಾಗಿ ಪರ್ಯಾಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.