ಮೈಸೂರು: ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಆಗುತ್ತಿಲ್ಲ. ಜಲಾಶಯಗಳ ನೀರಿನ ಮಟ್ಟ ಕಡಿಮೆ ಆಗುತ್ತಿದೆ. ಆದ್ದರಿಂದ ಕುಡಿಯುವ ನೀರಿಗೆ ಯಾವುದೇ ಕೊರತೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕುಡಿಯುವ ನೀರಿನ ಲಭ್ಯತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಳೆ ಉತ್ತಮವಾಗಿ ಆಗುತ್ತಿಲ್ಲ. 256 ಗ್ರಾಮ ಪಂಚಾಯಿತಿ ಹಾಗೂ 13 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ನೀರು ಸರಬರಾಜು ಮಾಡಬೇಕು. ಪ್ರತಿದಿನ ನೀರಿನ ಲಭ್ಯತೆ ಬಗ್ಗೆ ಮಾಹಿತಿ ನೀಡಬೇಕು. ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಆಗಬಹುದಾದ ಗ್ರಾಮಗಳ ಪಟ್ಟಿ ಮಾಡಿಕೊಳ್ಳಿ ಎಂದು ಗ್ರಾಮೀಣ ಕುಡಿಯುವ ನೀರಿನ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ಅವರಿಗೆ ಸೂಚಿಸಿದರು.
ಸದ್ಯದ ಸಂಧರ್ಭದಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ. ಆದರೂ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆ ಕಂಡುಬರಬಹುದಾದ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ ನೀರಿನ ಸಮಸ್ಯೆ ಕಂಡುಬಂದರೆ ಕೈಗೊಳ್ಳಬಹುದಾದ ಕ್ರಮಗಳನ್ನು ಗುರುತಿಸಿಕೊಳ್ಳಿ. ನೀರಿನ ಸಮಸ್ಯೆ ಕಂಡು ಬಂದರೆ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು ನೀರಿನ ಪೂರೈಕೆ ಮಾಡಿ. ಖಾಸಗಿ ಕೊಳವೆ ಬಾವಿಗಳು ದೊರೆಯದೆ ಹೋದರೆ ಅಂತಿಮವಾಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು ಎಂದರು.
ಕುಡಿಯುವ ನೀರಿನ ಗುಣಮಟ್ಟ ವನ್ನು ಪರಿಶೀಲಿಸಬೇಕು. ಕುಡಿಯುವ ನೀರಿನಲ್ಲಿ ಬ್ಯಾಕ್ಟೀರಿಯಲ್ ಮತ್ತು ಕೆಮಿಕಲ್ ಇಲ್ಲದಂತೆ ನೋಡಿಕೊಳ್ಳಬೇಕು. ಓವರ್ ಹೆಡ್ ಟ್ಯಾಂಕ್ ಹಾಗೂ ಸಂಪ್ ಗಳನ್ನು ನಿಯಮಿತವಾಗಿ ಸ್ವಚ್ಛತೆ ಮಾಡಿಸಬೇಕು. ಚರಂಡಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಕೊಳಚೆ ನೀರು ಕುಡಿಯುವ ನೀರಿನಲ್ಲಿ ಸೇರದಂತೆ ನೋಡಿಕೊಳ್ಳಬೇಕು. ತಪ್ಪಿದರೆ ಸಂಭಂದಿಸಿದ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಚ್ಚರಿಕೆ ನೀಡಿದರು.
ಮಹಾನಗರ ಪಾಲಿಕೆ ಆಯುಕ್ತರಾದ ಲಕ್ಷ್ಮೀಕಾಂತ ರೆಡ್ಡಿ ಅವರು ಮಾತನಾಡಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಬಿನಿ ಹಾಗೂ ಕೆ ಆರ್ ಎಸ್ ವ್ಯಾಪ್ತಿಯಲ್ಲಿ ವ್ಯವಸಾಯಕ್ಕೆ ನೀರನ್ನು ಬಳಸುತ್ತಿಲ್ಲ. ಕುಡಿಯುವ ನೀರಿಗೆ ಮಾತ್ರ ಬಳಕೆ ಮಾಡಲಾಗುತ್ತದೆ. ಕಬಿನಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಬಳಕೆಗೆ ಕೊರತೆ ಇಲ್ಲ. ಕಬಿನಿ ಯಿಂದ 19 ವಾರ್ಡ್ ಗಳಿಗೆ ನೀರು ಸರಬರಾಜು ಆಗುತ್ತಿದೆ. ಉಳಿದ ವಾರ್ಡ ಗಳಿಗೆ ಕೆ.ಆರ್.ಎಸ್ ಡ್ಯಾಮ್ ನಿಂದ ನೀಡಲಾಗುತ್ತಿದೆ. ಮೈಲಾಪುರ ದಿಂದ 100 mld, ಬೆಳಗೊಳದಿಂದ 60 mld, ಕಬಿನಿ ಇಂದ 80 mld ನೀರನ್ನು ಪಡೆಯಲಾಗುತ್ತಿದೆ. RBL ಕೆನಾಲ್ ನಿಂದ 50 mld ನೀರನ್ನು ಪಡೆಯಲಾಗುತ್ತಿದೆ. ಮಳೆ ಇಲ್ಲದೆ ಇದ್ದರೂ ಆಗಸ್ಟ್ 15 ರವರೆಗೆ ಕುಡಿಯುವ ನೀರಿನ ಸಮಸ್ಯೆ ಮೈಸೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಕಂಡುಬರುವುದಿಲ್ಲ ಎಂದು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಗಾಯತ್ರಿ ಅವರು ಮಾತನಾಡಿ ಕುಡಿಯುವ ನೀರಿನ ಮಾದರಿಗಳನ್ನು ಪಡೆದು ಪರೀಕ್ಷಿಸಬೇಕು.ನಾವು ಕುಡಿಯುವ ನೀರು ಶುದ್ಧವಾಗಿದೆ ಮತ್ತು ಯಾವುದೇ ಬ್ಯಾಕ್ಟೀರಿಯಾ ಮತ್ತು ಹಾನಿಕಾರಕ ಲೋಹಗಳನ್ನು ಹೊಂದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಪ್ರಯೋಗಾಲಯದಲ್ಲಿ ಕುಡಿಯುವ ನೀರಿನ ವಿಶ್ಲೇಷಣೆ ಅಗತ್ಯ. ಇದನ್ನು ಅಧಿಕಾರಿಗಳು ಮೊದಲ ಆದ್ಯತೆಯಲ್ಲಿ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.
ಕುಡಿಯುವ ನೀರಿನ ವಿಶ್ಲೇಷಣೆಯಲ್ಲಿ ಕುಡಿಯುವ ನೀರಿನ ಮಾದರಿಯು ಪ್ರಮುಖ ಪ್ರಕ್ರಿಯೆಯಾಗಿದೆ. ಅದನ್ನು ಪರೀಕ್ಷಿಸಲು ನೀರಿನ ಮೂಲವನ್ನು ಪ್ರತಿನಿಧಿಸುವ ಸ್ಥಳದಿಂದ ತೆಗೆದುಕೊಳ್ಳಬೇಕು ಎಂದು ಅವರು ತಿಳಿಸಿದರು.
ಗ್ರಾಮೀಣ ಕುಡಿಯುವ ನೀರಿನ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸುರೇಶ್ ಬಾಬು ಅವರು ಈಗಾಗಲೇ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಪಡೆಯಲು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಮ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥತರಿದ್ದರು.