ಮುಂಬೈ: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ ಹೊಡೆದ ಪರಿಣಾಮ ಲಾರಿ ಹೊತ್ತಿಕೊಂಡು ಉರಿದಿರುವ ಘಟನೆ ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ.
ಘಟನೆಯು ಲೋನಾವಾಲಾ-ಖಂಡಾಲಾ ಮಾರ್ಗದಲ್ಲಿ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ ಹೊಡೆದ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡು ಉರಿದಿದೆ. ಬೆಂಕಿಯ ತೀವ್ರತೆ ಹೆಚ್ಚಿದ್ದು ಬ್ರಿಡ್ಜ್ ಕೆಳಗೆ ಸಂಚರಿಸುತ್ತಿದ್ದವರಿಗು ತಗುಲಿದೆ.
ಸೇತುವೆ ಕೆಳಭಾಗ ಪ್ರಯಾಣಿಸುತ್ತಿದ್ದ ಬೈಕ್ ಸವಾರರಿಗೆ ಬೆಂಕಿ ತಗುಲಿದ್ದು ಈ ಪೈಕಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬೆಂಕಿ ನಂದಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿದು ಬಂದಿದೆ.