ತುಮಕೂರು : ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.
ಇಂದು ಬೆಳ್ಳಂಬೆಳಗ್ಗೆ ವಾಪಸ್ ತೆರಳುವಾಗ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಗಂಭೀರ ಗಾಯಗೊಂಡಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತರೆಲ್ಲರೂ ಬೆಂಗಳೂರು ಮೂಲದವರು ಎನ್ನಲಾಗುತ್ತಿದೆ.
ಅಪಘಾತದಲ್ಲಿ ಮೃತಪಟ್ಟವರು ಗೋಕರ್ಣ, ಮುರುಡೇಶ್ವರ, ಉಡುಪಿ ಕಡೆಗೆ ಪ್ರವಾಸಕ್ಕೆ ತೆರಳಿದ್ದರು. ಇಂದು ಬೆಳಗ್ಗೆ ಬೆಂಗಳೂರಿಗೆ ವಾಪಸ್ ಬರುತ್ತಿದ್ದರು. ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಮಾರುತಿ ಎರಿಟಿಗಾ ಕಾರಿನಲ್ಲಿ ಬರುವಾಗ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ, ಮೃತದೇಹಗಳನ್ನ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಈ ಘಟನಾ ಸ್ಥಳಕ್ಕೆ ತುಮಕೂರು ಎಸ್‌ಪಿ ಅಶೋಕ್ ಕೆವಿ ಹಾಗೂ ಕೋರಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.















