ಬಳ್ಳಾರಿ: ಭಾರತ ರತ್ನ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವು ಪ್ರತಿಯೊಬ್ಬರಿಗೂ ಶ್ರೀರಕ್ಷೆಯಾಗಿದೆ ಎಂದು ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಮತ್ತು ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ತುಳಿತಕ್ಕೊಳಗಾದವರನ್ನು ಮುಖ್ಯ ವಾಹಿನಿಗೆ ತರಲು ಅಂಬೇಡ್ಕರ್ ಅವರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು, ಹಗಲು-ರಾತ್ರಿ ಎನ್ನದೇ ಶ್ರಮಿಸಿ ಅಪಾರ ಜ್ಞಾನ ಹೊಂದಿ ಸಂವಿಧಾನವನ್ನೆ ನಮಗೆ ಅರ್ಪಿಸಿದ್ದಾರೆ. ಅಂಬೇಡ್ಕರ್ ಅವರ ತತ್ವಾದರ್ಶ ಜೀವನ ಎಲ್ಲರಿಗೂ ಮಾದರಿಯಾಗಬೇಕು ಎಂದು ತಿಳಿಸಿದರು.
ಶೋಷಿತರು, ದಲಿತರು, ಹಿಂದುಳಿದ ವರ್ಗದವರು ಸೇರಿದಂತೆ ಎಲ್ಲಾ ಸಮುದಾಯಗಳಿಗೆ ಸಮಾನ ಅವಕಾಶ ದೊರಕಿಸಿಕೊಡಬೇಕೆಂಬ ಆಶಯ ಬಾಬ ಸಾಹೇಬ್ ಅಂಬೇಡ್ಕರ್ ಹೊಂದಿದ್ದರು. ಅವರ ಆಶಯಗಳನ್ನೇ ನಮ್ಮ ಸರ್ಕಾರವು ಅಳವಡಿಸಿಕೊಂಡು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದೆ ಎಂದು ಹೇಳಿದರು.
ನಮ್ಮ ಸರ್ಕಾರದ 4 ಲಕ್ಷ ಕೋಟಿ ರೂ. ಬಜೆಟ್‌ನಲ್ಲಿ 38 ಸಾವಿರ ಕೋಟಿ ರೂ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರ ಅಭಿವೃದ್ಧಿಗಾಗಿ ಮೀಸಲಿರಿಸಲಾಗಿದೆ ಎಂದು ಅವರು ತಿಳಿಸಿದರು.
ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಕೊಡುಗೆ, ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ತಿಳಿಸಿಕೊಡುವ ಕೊಡುವ ಕೆಲಸವಾಗಬೇಕಿದೆ ಎಂದು ಅಭಿಪ್ರಾಯಪಟ್ಟ ಶಾಸಕ ಬಿ.ನಾಗೇಂದ್ರ ಅವರು, ಬಳ್ಳಾರಿ ಜಿಲ್ಲೆಯ ಅಭಿವೃದ್ಧಿಗೆ ನಾವೆಲ್ಲರೂ ಒಗ್ಗಟ್ಟಾಗಿ ಶ್ರಮಿಸೋಣ ಎಂದು ಕರೆ ನೀಡಿದರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಬೇಡ್ಕರ್ ಅವರ ಜಯಂತಿ ಕೇವಲ ಆಚರಣೆಗೆ ಸೀಮಿತವಾಗದೇ ಅವರನ್ನು ಪ್ರತಿನಿತ್ಯವೂ ನೆನೆಯಬೇಕು. ಅವರು ಕೇವಲ ಒಂದೇ ಸಮುದಾಯಕ್ಕೆ ಸೀಮಿತವಾದವರಲ್ಲ, ಬದಲಾಗಿ ಎಲ್ಲಾ ಸಮುದಾಯದವರ ಶ್ರೇಯೋಭಿವೃದ್ಧಿಗೆ ತಮ್ಮ ಜೀವನವನ್ನೇ ಸವೆಸಿದವರು ಎಂದು ಹೇಳಿದರು.
ಹಿಂದೆಲ್ಲಾ ಶೋಷಿತ ವರ್ಗದವರನ್ನು ತುಳಿಯಲು ಸಾಕಷ್ಟು ಸಂಚು ನಡೆಯುತ್ತಿದ್ದವಾದರೂ, ಅಂಬೇಡ್ಕರ್ ಅವರು ನೀಡಿರುವ ಸಂವಿಧಾನವು ಅಡ್ಡಗೋಡೆಯಾಗಿ ನಿಂತಿದೆ. ಸಂವಿಧಾನವನ್ನು ಉಳಿಸುವ ಮತ್ತು ಬೆಳೆಸುವುದಕ್ಕಾಗಿ ನಾವೆಲ್ಲರೂ ಒಗ್ಗೂಡಬೇಕಿದೆ ಎಂದು ಕರೆ ನೀಡಿದರು.
ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನವು ಸ್ವಾಭಿಮಾನದ ದಿನವಾಗಿದೆ. ಎಲ್ಲರೂ ಶಿಕ್ಷಣ ಹೊಂದುವ ಮೂಲಕ ಸಂಘಟಿತರಾಗಿ, ನಮ್ಮ-ನಮ್ಮ ಹಕ್ಕು ಸೌಲಭ್ಯಗಳನ್ನು ಪಡೆಯಲು ಹೋರಾಟ ನಡೆಸಬೇಕು. ಇದರಿಂದ ಸ್ವಾಭಿಮಾನದ ಜೀವನ ಹೊಂದಲು ಸಾಧ್ಯ ಎಂದು ಅವರು ಅಭಿವ್ಯಕ್ತ ಪಡಿಸಿದರು.
ದೇಶದ ಸಾಮಾನ್ಯ ವ್ಯಕ್ತಿಯು ಕೂಡ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಉನ್ನತ ಸ್ಥಾನ ಮತ್ತು ಅತ್ಯುನ್ನತ ಹುದ್ದೆ ಹೊಂದಲು ಬಾಬಾ ಸಾಹೇಬರು ನೀಡಿರುವ ಸಂವಿಧಾನ ಕಾರಣವಾಗಿದೆ ಎಂದು ಮನನ ಮಾಡಿದರು.
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ್ ಬಹುಶಿಸ್ತೀಯ ಸಂಶೋಧನಾ ಕೇಂದ್ರದ ನಿರ್ದೇಶಕರೂ ಹಾಗೂ ಪ್ರಾಧ್ಯಾಪಕರಾದ ಡಾ.ಗೌರಿ ಮಾಣಿಕ್ ಮಾನಸ್ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಸಂವಿಧಾನ ಪೀಠಿಕೆ ವಾಚನ ಮಾಡಿಸಿದರು.
ಕಾರ್ಯಕ್ರಮದಲ್ಲಿ ಗಣ್ಯರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ವಸತಿ ನಿಲಯಗಳಲ್ಲಿ ವಿದ್ಯಾಭ್ಯಾಸ ಹೊಂದಿ ಕಳೆದ ಸಾಲಿನಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಬಳಿಕ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 60 ದಿನಗಳ ಹೊಲಿಗೆಯಂತ್ರ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಹೊಲಿತೆಯಂತ್ರ ಮತ್ತು ಪ್ರಮಾಣ ಪತ್ರಗಳನ್ನು ಗಣ್ಯರು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಅಧ್ಯಕ್ಷ ಬಿ.ಕೆ.ಅನಂತ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತರು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ.ಬಿ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಸಾರ್ವಜನಿಕರು, ಮತ್ತೀತರರು ಉಪಸ್ಥಿತರಿದ್ದರು.
ಅದ್ದೂರಿ ಸ್ತಬ್ಧಚಿತ್ರ ಮೆರವಣಿಗೆ: ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಯು ವಿವಿಧ ಸಾಂಸ್ಕೃತಿಕ ಕಲಾ ತಂಡಗಳನ್ನೊಳಗೊAಡು ನಗರದಲ್ಲಿ ಅದ್ದೂರಿಯಾಗಿ ನಡೆಯಿತು.
ಮೆರವಣಿಗೆಯಲ್ಲಿ ಸಾರಿಗೆ ಇಲಾಖೆ ವತಿಯಿಂದ ರೂಪಿಸಿದ್ದ ವಿಧಾನಸೌಧ ಸ್ತಬ್ಧಚಿತ್ರ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ವತಿಯಿಂದ ವಿವಿಧ ಸರ್ಕಾರದ ಕಾರ್ಯಕ್ರಮಗಳು ಮತ್ತು ವಿವಿಧ ಯೋಜನೆಗಳ ಮಾಹಿತಿ ಕುರಿತ ಸ್ತಬ್ಧಚಿತ್ರಗಳು ಗಮನ ಸೆಳೆದವು.
ಮೆರವಣಿಗೆಗೆ ಮುನ್ನ ನಗರದ ಮೊದಲನೇ ರೈಲ್ವೇ ಗೇಟ್ ಬಳಿಯ ಸಮಾಜ ಕಲ್ಯಾಣ ಇಲಾಖೆಯ ಅಂಬೇಡ್ಕರ್ ಭವನ ಆವರಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಗಣ್ಯರು ಮಾಲಾರ್ಪಣೆ ಮಾಡಿದರು.