ಬೆಂಗಳೂರು: ಸೂಚನಾ ಫಲಕಗಳಲ್ಲಿ ಕಡ್ಡಾಯವಾಗಿ ಶೇ 60 ರಷ್ಟು ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ನಿಯಮ ಸಂಬಂಧಿತ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದು, ವಿಧೇಯಕ ಮಂಡಿಸಿ ಅನುಮೋದನೆ ಪಡೆಯುವಂತೆ ಸೂಚಿಸಿದ್ದಾರೆ.
ಜನವರಿ 5 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ವ್ಯಾಪಾರ ಸಂಸ್ಥೆಗಳಲ್ಲಿ ಸೂಚನಾ ಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ’ಗೆ ತಿದ್ದುಪಡಿ ತರಲು ಸುಗ್ರೀವಾಜ್ಞೆಗೆ ಅನುಮೋದನೆ ನೀಡಲಾಗಿತ್ತು.
ಸುಗ್ರೀವಾಜ್ಞೆಯನ್ನು ಹೊರಡಿಸಲು ಅನುಮೋದನೆ ನೀಡುವಂತೆ ರಾಜ್ಯ ಸರ್ಕಾರವು ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಆದರೆ ಗೆಹ್ಲೋಟ್ ಅದನ್ನು ವಿಧಾನಸಭೆಯಲ್ಲಿ ಅಂಗೀಕರಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.
ಸರ್ಕಾರವು ಸೂಚನಾ ಫಲಕಗಳಲ್ಲಿ ಕನ್ನಡ ಭಾಷೆಯನ್ನು ಹೆಚ್ಚಿಸಲು ಕಾನೂನು ಮಾಡಿದೆ. ಆದರೆ ರಾಜ್ಯಪಾಲರು ಅದನ್ನು ತಿರಸ್ಕರಿಸಿ ವಿಧಾನಸಭೆಯಲ್ಲಿ ಅಂಗೀಕಾರ ಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ. ಅವರು ಸಹಿ ಹಾಕಬಹುದಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಅಧಿವೇಶನ ನಡೆಯದ ಕಾರಣ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯ ಮಾರ್ಗ ಹಿಡಿದಿತ್ತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಬೆಂಗಳೂರಿನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯ ನಂತರ ಸರ್ಕಾರವು ಕನ್ನಡ ಪರ ಕಾರ್ಯಕರ್ತರ ಒತ್ತಡಕ್ಕೆ ಒಳಗಾಗಿದೆ. ಈ ಪ್ರಕರಣದಲ್ಲಿ ಹಲವು ಕನ್ನಡ ಪರ ಕಾರ್ಯಕರ್ತರನ್ನು ಬಂಧಿಸಲಾಗಿತ್ತು.
ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ಅಂಗೀಕರಿಸಿದ 17 ಮಸೂದೆಗಳ ಪೈಕಿ ರಾಜ್ಯಪಾಲರು ಇದುವರೆಗೆ ಐದಕ್ಕೆ ಮಾತ್ರ ಸಹಿ ಹಾಕಿದ್ದಾರೆ. ಉಳಿದವು ಬಾಕಿ ಉಳಿದಿದ್ದು, ಬಿಲ್ ಗಳಿಗೆ ಸಂಬಂಧಿಸಿದ ಹೆಚ್ಚಿನ ವಿವರಗಳನ್ನು ಕೇಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ರಾಜ್ಯಪಾಲರನ್ನು ಭೇಟಿ ಮಾಡಿ ಬಾಕಿ ಇರುವ ಬಿಲ್ ಗಳನ್ನು ಅನುಮೋದಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.