ಮನೆ ರಾಜ್ಯ ಸರ್ಕಾರಿ ಆಸ್ಪತ್ರೆಯಲ್ಲಿ ದುಬಾರಿ ಆರೋಗ್ಯ ಸೇವೆ ಸಿಕ್ಕಾಗ ಮಾತ್ರ ಆರೋಗ್ಯ ಕ್ಷೇತ್ರದಲ್ಲಿ ಹೊಸ ಕ್ರಾಂತಿ: ಸಚಿವ...

ಸರ್ಕಾರಿ ಆಸ್ಪತ್ರೆಯಲ್ಲಿ ದುಬಾರಿ ಆರೋಗ್ಯ ಸೇವೆ ಸಿಕ್ಕಾಗ ಮಾತ್ರ ಆರೋಗ್ಯ ಕ್ಷೇತ್ರದಲ್ಲಿ ಹೊಸ ಕ್ರಾಂತಿ: ಸಚಿವ ಸುಧಾಕರ್‌

0

ಬೆಂಗಳೂರು (Bengaluru)- ಸರಕಾರಿ ಆಸ್ಪತ್ರೆಗಳಲ್ಲಿ ದುಬಾರಿ ಆರೋಗ್ಯ ಸೇವೆಗಳು ಉಚಿತವಾಗಿ ಸಿಕ್ಕಾಗ ಮಾತ್ರ ಆರೋಗ್ಯ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮಾಡಬಹುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ (Dr K.Sudhakar) ಹೇಳಿದ್ದಾರೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸಾ ವ್ಯವಸ್ಥೆ ಹೈಪರ್ ಬೇರಿಯಾಕ್ ಆಕ್ಸಿಜನ್ ಥೆರಪಿ ಯೂನಿಟ್ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಇಂತಹ ಆರೋಗ್ಯ ಸೌಲಭ್ಯಗಳು ಕರ್ನಾಟಕದ ಆರೋಗ್ಯ ಕ್ಷೇತ್ರವನ್ನು ಮತ್ತೊಂದು ಹಂತಕ್ಕೆ ಕೊಂಡೊಯುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಆರೋಗ್ಯ ಸೇವೆ ಸಾರ್ವಜನಿಕರಿಗೆ ಸಿಗುತ್ತಿದೆ. ದುಬಾರಿ ಚಿಕಿತ್ಸೆಗಳು ಸರ್ಕಾರಿ ಆರೋಗ್ಯ ಸೇವೆಗಳ ಮೂಲಕ ಬಡವರಿಗೂ ಸಿಗುವಂತಾಗಬೇಕು ಎಂದರು.

ಕರ್ನಾಟಕದಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಮೊತ್ತ ಮೊದಲ ಬಾರಿಗೆ ಹೈಪರ್ ಬೇರಿಯಾಕ್ ಆಕ್ಸಿಜನ್ ಥೆರಪಿ ಸಾರ್ವಜನಿಕ ಸೇವೆಗೆ ಲಭ್ಯವಾಗಿದೆ. ಕೊರೊನಾ ನಂತರ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಬದಲಾವಣೆಗಳು ಆಗುತ್ತಿವೆ. ಸರಕಾರಿ ಆರೋಗ್ಯ ವ್ಯವಸ್ಥೆಯಲ್ಲಿ ದೊಡ್ಡ ಮಟ್ಟದ ಬದಲಾವಣೆ ಮತ್ತು ಅಭಿವೃದ್ಧಿಯಾಗುತ್ತಿದೆ ಎಂದು ತಿಳಿಸಿದರು.

ಹೈಪರ್ ಬೇರಿಯಾಕ್ ಆಕ್ಸಿಜನ್ ಥೆರಪಿ ಅಥವಾ HBO2 ದುಬಾರಿ ಚಿಕಿತ್ಸೆಯಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಇಂತಹ ಸೇವೆ ಲಭ್ಯವಾಗುತ್ತಿರುವುದರಿಂದ ಸಾಮಾನ್ಯ ಜನರಿಗೂ ಇದರ ಸೇವೆ ಸಿಗುವ ಹಾಗಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಉದ್ಘಾಟನೆಯಾಗಿರುವ ಈ HBO2 ಯೂನಿಟ್ ಅನ್ನು ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗಿದೆ. ಸುಮಾರು 3.5 ಕೋಟಿ ರೂಪಾಯಿ ವೆಚ್ಚದ ಆಧುನಿಕ ಯಂತ್ರೋಪಕರಣಗಳು ಇದಾಗಿದೆ ಎಂದು ವಿವರಿಸಿದರು.

ಆರೋಗ್ಯ ಕ್ಷೇತ್ರಕ್ಕೆ ಸರಕಾರ ಹೆಚ್ಚು ಒತ್ತು ನೀಡುತ್ತಿದೆ. ಆರೋಗ್ಯ ಕ್ಷೇತ್ರದಲ್ಲಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಆದಂತೆ. ಹೀಗಾಗಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ತರುವ ಕೆಲಸಗಳು ನಡೆಯುತ್ತಿವೆ ಎಂದು ಸಚಿವರು ಹೇಳಿದರು.