ಮನೆ ಕಾನೂನು 8 ರಿಂದ 10 ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂಕೋರ್ಟ್​ ನಿರ್ಬಂಧ

8 ರಿಂದ 10 ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂಕೋರ್ಟ್​ ನಿರ್ಬಂಧ

0

ನವದೆಹಲಿ: ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಇದೇ ವೇಳೆ ಮುಂದಿನ ಆದೇಶದವರೆಗೆ 8, 9 ಮತ್ತು 10 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ನಿರ್ಬಂಧ ವಿಧಿಸಿದೆ.

Join Our Whatsapp Group

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವನ್ನೊಳಗೊಂಡ ಪೀಠವು ಈ ಆದೇಶ ನೀಡಿದೆ. “ವಿದ್ಯಾರ್ಥಿಗಳಿಗೆ ಏಕೆ ತೊಂದರೆ ನೀಡುತ್ತಿದ್ದೀರಿ, ರಾಜ್ಯ ಸರ್ಕಾರವೇ ಈ ರೀತಿಯಾಗಿ ವರ್ತಿಸಬಾರದು. ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳಬೇಡಿ. ನಿಮಗೆ ನಿಜವಾಗಿಯೂ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಇದ್ದರೆ ದಯವಿಟ್ಟು ಒಳ್ಳೆಯ ಶಾಲೆಗಳನ್ನು ತೆರೆಯಿರಿ ಎಂದು ಪೀಠ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ. ಕರ್ನಾಟಕ ಸರ್ಕಾರದ ಪರವಾಗಿ ಹಿರಿಯ ವಕೀಲ ದೇವದತ್ತ್ ಕಾಮತ್ ವಾದ ಮಂಡಿಸಿದ್ದರು.

ಇತರ ರಾಜ್ಯಗಳಲ್ಲಿ ಕರ್ನಾಟಕದ ಮಾದರಿ ಇಲ್ಲ: ಕರ್ನಾಟಕ ಸರ್ಕಾರ ಅನುಸರಿಸುತ್ತಿರುವ ಶಿಕ್ಷಣದ ಮಾದರಿಯನ್ನು ಬೇರೆ ಯಾವುದೇ ರಾಜ್ಯಗಳು ಅನುಸರಿಸುತ್ತಿಲ್ಲ ಎಂದೂ ಇದೇ ವೇಳೆ ಪೀಠ ಹೇಳಿದೆ. ರಾಜ್ಯದ ಏಳು ಗ್ರಾಮಾಂತರ ಜಿಲ್ಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 5, 8, 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಸುತ್ತೋಲೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ ಎಂದು ಇದೇ ವೇಳೆ ಕಾಮತ್ ಕೋರ್ಟ್​ ಗಮನಕ್ಕೆ ತಂದರು.

ಇತರ 24 ಜಿಲ್ಲೆಗಳಲ್ಲಿ ಪರೀಕ್ಷೆ ನಡೆಸಲಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ಅವರು ಮಾಹಿತಿ ನೀಡಿದರು. ನಾಲ್ಕು ವಾರಗಳಲ್ಲಿ ಪರೀಕ್ಷೆಯ ನಿಖರವಾದ ವಿವರಗಳನ್ನು ನೀಡುವ ಅಫಿಡವಿಟ್ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಮಾರ್ಚ್ 22 ರಂದು ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳ ಸಂಸ್ಥೆ ಸಲ್ಲಿಸಿದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಏಕ ನ್ಯಾಯಾಧೀಶರ ಪೀಠದ ಮಾರ್ಚ್ 6ರ ಆದೇಶವನ್ನು ತಳ್ಳಿಹಾಕಿದ ಹೈಕೋರ್ಟ್​ ದ್ವಿಸದಸ್ಯ ಪೀಠ 2023-24ನೇ ಶೈಕ್ಷಣಿಕ ವರ್ಷಕ್ಕೆ ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿತ್ತು.

ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಮೂಲಕ ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ರಾಜ್ಯ ಸರ್ಕಾರದ ಅಕ್ಟೋಬರ್ 2023 ರ ನಿರ್ಧಾರವನ್ನು ಹೈಕೋರ್ಟ್‌ ನ ಏಕ ಸದಸ್ಯ ನ್ಯಾಯಪೀಠ ರದ್ದುಗೊಳಿಸಿತ್ತು.