ಬೆಂಗಳೂರು: 2022 ರಲ್ಲಿ ರಾಜ್ಯದಲ್ಲಿ ನಡೆದಿದ್ದ ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.
ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಪಿ ಕೆ ಮಿಶ್ರಾ ಅವರ ಪೀಠವು ಕರ್ನಾಟಕ ಸರ್ಕಾರ ಮತ್ತು ಪ್ರಕರಣದ ದೂರುದಾರರಿಗೆ ನೋಟಿಸ್ ಜಾರಿ ಮಾಡಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ರಾಜ್ಯ ಸಚಿವರಾದ ಎಂ ಬಿ ಪಾಟೀಲ್ ಮತ್ತು ರಾಮಲಿಂಗಾ ರೆಡ್ಡಿ ಅವರಿಗೆ 10,000 ರೂಪಾಯಿ ದಂಡ ವಿಧಿಸಿದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಮಾರ್ಚ್ 6 ರಂದು ವಿಶೇಷ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಳೂರಿನ ನಿವಾಸಕ್ಕೆ ಮುತ್ತಿಗೆ ಹಾಕಿದ ಕಾಂಗ್ರೆಸ್ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈಶ್ವರಪ್ಪ ತಮ್ಮ ಗ್ರಾಮದ ಸಾರ್ವಜನಿಕ ಕಾಮಗಾರಿಗೆ ಶೇ. 40ರಷ್ಟು ಕಮಿಷನ್‌ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಪೊಲೀಸರ ಪ್ರಕಾರ ಈ ಪ್ರಕರಣ ರಸ್ತೆಗಳನ್ನು ಬಂದ್ ಮಾಡಿ, ಪ್ರಯಾಣಿಕರಿಗೆ ತೊಂದರೆ ಉಂಟು ಮಾಡಿದ್ದಕ್ಕೆ ಸಂಬಂಧಿಸಿದ್ದಾಗಿದೆ.