ಮನೆ ರಾಜಕೀಯ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆ ಆಗಿಲ್ಲ: ಜಿ.ಪರಮೇಶ್ವರ

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆ ಆಗಿಲ್ಲ: ಜಿ.ಪರಮೇಶ್ವರ

0

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಚರ್ಚೆಗಳಾಗುತ್ತಿರುವುದು ನಿಜ. ಆದರೆ, ಪಕ್ಷದ ವೇದಿಕೆಯಲ್ಲಿ ಅಥವಾ ಸರ್ಕಾರದ ಹಂತದಲ್ಲಿ ಈ ವಿಷಯ ಚರ್ಚೆ ಆಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

Join Our Whatsapp Group

ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ಸಚಿವರು, ಮುಖಂಡರು ದೆಹಲಿಗೆ ಹೋದಾಗ ಎಐಸಿಸಿ ಕಚೇರಿಗೆ ಭೇಟಿ ನೀಡುವುದು ಸಂಪ್ರದಾಯ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ತಲುಪಬೇಕು ಎಂಬುದು ಬಹಳ ಜನರ ಅಭಿಪ್ರಾಯ. ಈಗಾಗಲೇ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ₹ 56 ಸಾವಿರ ಕೋಟಿ ಮೀಸಲಿಡಲಾಗಿದೆ. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡುವುದು ಸಾಧ್ಯವಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಶಾಸಕರು, ಕಾರ್ಯಕರ್ತರು ಸಾರ್ವಜನಿಕವಾಗಿ ಅಲ್ಲಲ್ಲಿ ಮಾತನಾಡಿರಬಹುದು. ಪಕ್ಷದ ವೇದಿಕೆಯಲ್ಲಿ, ಸರ್ಕಾರದ ಹಂತದಲ್ಲಿ ಚರ್ಚೆಯಾಗಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶೇ.13ರಷ್ಟು ಮತ ಹೆಚ್ಚಾಗಿವೆ. ಗ್ಯಾರಂಟಿ ಯೋಜನೆಗಳಿಂದ ಮತ ಹೆಚ್ಚಾಗಿದೆ ಎಂದು ಯಾಕೆ ವಿಶ್ಲೇಷಣೆ ಮಾಡಬಾರದು ಎಂದ ಅವರು, ಗ್ಯಾರಂಟಿ ಯೋಜನೆ ಪರಿಷ್ಕರಣೆ ಬಗ್ಗೆ ನನ್ನ ಅಭಿಪ್ರಾಯವೊಂದೇ ಮುಖ್ಯ ಆಗುವುದಿಲ್ಲ. ಒಬ್ಬೊಬ್ಬರು ಒಂದೊಂದು ಹೇಳಿಕೆಗಳನ್ನು ನೀಡುತ್ತಾ ಹೋದರೆ ಗೊಂದಲ ಉಂಟಾಗುತ್ತದೆ ಎಂದರು.

ಮುಡಾ ವಿಚಾರದಲ್ಲಿ ರಾಜ್ಯಪಾಲರ ನಡೆಯ ಬಗ್ಗೆ  ನಾನೇನೂ ಹೇಳಲು ಹೋಗುವುದಿಲ್ಲ. ತಪ್ಪು ತೀರ್ಮಾನ ತೆಗೆದುಕೊಳ್ಳುತ್ತಿದ್ದೀರಿ. ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಬೇಡಿ. ಸಿಎಂ ಅವರಿಗೆ ನೀಡಿರುವ ಶೋಕಾಸ್ ನೋಟಿಸ್ ವಾಪಸ್ ಪಡೆಯುವಂತೆ ಸಚಿವ ಸಂಪುಟ ಸಭೆ ತೀರ್ಮಾನಿಸಿ ರಾಜ್ಯಪಾಲರಿಗೆ ಸಲಹೆ ಮಾಡಿದೆ. ಇದನ್ನು ರಾಜ್ಯಪಾಲರು ಸ್ವೀಕರಿಸಬೇಕು. ಇಲ್ಲವಾದರೆ ಮುಂದಿನ ಕ್ರಮದ ಬಗ್ಗೆ ಸಮರ್ಥನೆ ನೀಡಬೇಕಾಗುತ್ತದೆ ಎಂದು ಹೇಳಿದರು‌.

ಒಳಮೀಸಲಾತಿ ಜಾರಿ ಮಾಡುವ ಕುರಿತು ಎಐಸಿಸಿಯವರು ರಾಜ್ಯ ಸರ್ಕಾರಕ್ಕೆ ಯಾವ ನಿರ್ದೇಶನ ನೀಡುತ್ತಾರೆಯೋ. ಅದರ ಪ್ರಕಾರ ಮುಂದುವರಿಯುತ್ತೇವೆ. ಈ ಬಗ್ಗೆ ಹೈಕಮಾಂಡ್ ಹಂತದಲ್ಲಿ ಚರ್ಚೆ ಆಗಬೇಕು ಎಂದರು.

ಬೋವಿ ನಿಗಮದ ಮೇಲೆ ಸಿಐಡಿ ದಾಳಿ ನಡೆಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ಅಕ್ರಮದ ಬಗ್ಗೆ ತನಿಖೆಗೆ ಆದೇಶಿಸಲಾಗಿತ್ತು. ಇದರ ಭಾಗವಾಗಿ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಬಿಜೆಪಿ ಅಧಿಕಾರವಧಿಯಲ್ಲಿ ನಡೆದಿರುವ ಎಲ್ಲ ಅಕ್ರಮಗಳ ಬಗ್ಗೆ ತನಿಖೆ ಮಾಡುತ್ತೇವೆ.‌‌ ಎಲ್ಲವನ್ನೂ ತಾರ್ಕಿಕ ಅಂತ್ಯಕ್ಕೆ ತರುತ್ತೇವೆ’ ಎಂದು ಹೇಳಿದರು.