ನವದೆಹಲಿ: ಇದು ರಾಜಕೀಯ ಚಳವಳಿ ಅಲ್ಲ, ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಆಗಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಯೋಜಿಸಿರುವ ‘ಛಲೋ ದೆಹಲಿ’ ಪ್ರತಿಭಟನೆಗೂ ಮುನ್ನ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಎಲ್ಲ ಶಾಸಕರು, ಸಚಿವರು ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಇದು ರಾಜಕೀಯ ಹೋರಾಟ ಅಲ್ಲ, ಇದು ಕನ್ನಡಿಗರ ಹಿತ ಕಾಪಾಡುವ ಚಳವಳಿ ಎಂದರು.
ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಎಸಗಿದೆ. ಈ ವಿಚಾರದಲ್ಲಿ ಕರ್ನಾಟಕಕ್ಕೆ ದೊಡ್ಡ ಅನ್ಯಾಯ ಆಗಿದೆ. ರಾಜ್ಯಕ್ಕಾದ ಅನ್ಯಾಯದ ವಿರುದ್ಧ ಹೋರಾಟ ಮಾಡ್ತಿದ್ದೇವೆ. ರಾಜ್ಯದ ಸಂಸದರಿಗೂ ಪತ್ರ ಬರೆದು ಮನವಿ ಮಾಡಿದೆ. ಇದು ಐತಿಹಾಸಿಕವಾದ ಚಳವಳಿ. ಸುಮಾರು ಶೇ 40-45 ರಷ್ಟು ತೆರಿಗೆ ಪಾಲು ನಮಗೆ ಬರಬೇಕು. ನಾವು 4 ಲಕ್ಷ 30 ಸಾವಿರ ಕೋಟಿ ತೆರಿಗೆ ಕಟ್ಟುತ್ತಿದ್ದೇವೆ. 100 ರೂ. ತೆರಿಗೆ ಕಟ್ಟಿದ್ದರೆ ಕೇವಲ 12 ರೂಪಾಯಿ ಅಷ್ಟೇ ನಮಗೆ ಬರುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.
ರಾಜ್ಯಗಳಿಂದ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಹಣ ಹೋಗುತ್ತದೆ. ಹಣಕಾಸು ಆಯೋಗ ನಿರ್ಧರಿಸಿದಂತೆ ರಾಜ್ಯಗಳಿಗೆ ಅನುದಾನ ನೀಡಬೇಕು. 14ನೇ ಹಣಕಾಸು ಆಯೋಗದ ನಿಯಮಾನುಸಾರ ರಾಜ್ಯಕ್ಕೆ ಶೇ 42ರಷ್ಟು ಹಣ ನೀಡಬೇಕು. 15ನೇ ಹಣಕಾಸು ಆಯೋಗದ ನಿಯಮಾನುಸಾರ ರಾಜ್ಯಕ್ಕೆ ಶೇ 41ರಷ್ಟು ಹಣ ನೀಡಬೇಕು ಎಂದು ಸಿಎಂ ಆಗ್ರಹಿಸಿದರು.