ಇಂದೋರ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಮೂವರು ಮೃತಪಟ್ಟಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. 34 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ವಿವಾಹೇತರ ಸಂಬಂಧದಲ್ಲಿ ಇದ್ದಾಳೆ ಎಂಬ ಅನುಮಾನದಿಂದ ಆಕೆಯನ್ನು ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯಲ್ಲಿ ಮಹಿಳೆಯ ಪ್ರಿಯಕರನೂ ಸಹ ಆತ್ಮಹತ್ಯೆ ಮಾಡಿಕೊಂಡಿರುವುದು ದೃಢವಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಇಂದೋರ್ ನಗರದ ಹಿರಾ ನಗರ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ತನ್ನ 28 ವರ್ಷದ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ, ನಂತರ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಡೆತ್ ನೋಟ್ನಲ್ಲಿ ಪತಿ ಗಂಭೀರ ಆರೋಪಗಳನ್ನು ಮಾಡಿದ್ದು, ಪಿತಾಂಪುರದಲ್ಲಿ ವಾಸಿಸುವ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಪ್ರೇಮಿಸಿ, ಆಕೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದಾನೆ ಎಂದು ತಿಳಿಸಿದ್ದಾರೆ. ಜೊತೆಗೆ ಆಕೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂಬುದನ್ನೂ ಉಲ್ಲೇಖಿಸಿದ್ದಾರೆ.ಪತ್ನಿ ಪದೇ ಪದೇ ಮನವಿ ಮಾಡಿದರೂ ಪ್ರಿಯಕರನಿಂದ ದೂರವಾಗಲಿಲ್ಲ ಮತ್ತು ಅವನೊಂದಿಗೆ ಸಂಬಂಧ ಮುಂದುವರಿಸಿದ್ದಳು ಎಂದು ಡೆತ್ ನೋಟ್ನಲ್ಲಿ ಹೇಳಲಾಗಿದೆ.
ಈ ದಾರುಣ ಘಟನೆ ಬಳಿಕ, ಮಹಿಳೆಯ ಪ್ರಿಯಕರ ಎಂದು ಹೇಳಲಾಗುತ್ತಿರುವ ವ್ಯಕ್ತಿ ಭಯದಿಂದ ನೆರೆಯ ಖಾಂಡ್ವಾ ಜಿಲ್ಲೆಯ ತನ್ನ ಊರಿಗೆ ತೆರಳಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.


















