ಈಗಾಗಲೇ ಸದ್ದಿಲ್ಲದೆ ತನ್ನ ಶೂಟಿಂಗ್ ಮತ್ತು ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ “ಅಭಿರಾಮಚಂದ್ರ’ದ ಬಿಡುಗಡೆಗೆ ಸೆನ್ಸಾರ್ ಮಂಡಳಿಯಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇತ್ತೀಚೆಗಷ್ಟೇ “ಅಭಿರಾಮಚಂದ್ರ’ ಸಿನಿಮಾವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ “ಯು/ಎ’ ಪ್ರಮಾಣ ಪತ್ರ ನೀಡಿ ಬಿಡುಗಡೆಗೆ ಅಸ್ತು ಎಂದಿದೆ.
ಬಾಲ್ಯದ ಸ್ನೇಹ, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥಾಹಂದರ ಒಳಗೊಂಡಿರುವ “ಅಭಿರಾಮಚಂದ್ರ’ ಸಿನಿಮಾದಲ್ಲಿ ರಥ ಕಿರಣ, ಸಿದ್ದು ಮೂಲಿಮನಿ, ನಾಟ್ಯರಂಗ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಶಿವಾನಿ ರೈ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
ಉಳಿದಂತೆ ವೀಣಾ ಸುಂದರ್, ಸುಂದರ್, ಎಸ್. ನಾರಾಯಣ್, ಪ್ರಕಾಶ್ ತುಮ್ಮಿನಾಡು, ಪವನ್ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಇನ್ನು “ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ನಾಗೇಂದ್ರ ಗಾಣಿಗ “ಅಭಿರಾಮಚಂದ್ರ’ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ಮೊದಲ ಬಾರಿಗೆ ಸ್ವತಂತ್ರ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. “ಎ.ಜಿ.ಎಸ್ ಎಂಟಟೈನ್ಮೆಂಟ್’ ಹಾಗೂ “ರವಿ ಬಸ್ರೂರು ಮ್ಯೂಸಿಕ್ ಮತ್ತು ಮೂವೀಸ್’ ಬ್ಯಾನರ್‌ನಡಿ ಎ. ಜಿ. ಸುರೇಶ್ ಹಾಗೂ ಮಲ್ಲೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಚಿತ್ರದ ಹಾಡುಗಳಿಗೆ ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದು, ಸಂದೀಪ್ ವಲ್ಲೂರಿ ಛಾಯಾಗ್ರಹಣ, ಸುರೇಶ್ ಆರುಮುಗಂ ಸಂಕಲನವಿದೆ. ಕುಂದಾಪುರ, ಬೆಂಗಳೂರು, ಮೈಸೂರು ಸುತ್ತಮುತ್ತ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ.