ಮುಂಬೈ (Mumbai): ಬಹುಮತ ಸಾಬೀತುಪಡಿಸುವಂತೆ ಮಹಾ ವಿಕಾಸ್ ಆಘಾಡಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದ ಉದ್ಧವ್ ಠಾಕ್ರೆ ಅವರು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಬುಧವಾರ ರಾತ್ರಿ ರಾಜಭವನಕ್ಕೆ ತೆರಳಿದ ಉದ್ಧವ್ ಠಾಕ್ರೆ ಅವರು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ರಾಜೀನಾಮೆಯನ್ನು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅಂಗೀಕರಿಸಿದ್ದಾರೆ. ಪರ್ಯಾಯ ವ್ಯವಸ್ಥೆ ಮಾಡುವವರೆಗೆ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ ಅವರು ಕೇಳಿಕೊಂಡಿದ್ದಾರೆ ಎಂದು ರಾಜಭವನ ತಿಳಿಸಿದೆ.
ವಿಶ್ವಾಸಮತ ಯಾಚಿಸುವಂತೆ ಸೂಚನೆ ನೀಡಿರುವ ಮಹಾರಾಷ್ಟ್ರ ರಾಜ್ಯಪಾಲರ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಕೆಲವೇ ಕ್ಷಣಗಳಲ್ಲಿ ಫೇಸ್‌ಬುಕ್ ಲೈವ್ ಬಂದ ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.