ಬೆಂಗಳೂರು, ಸೆಪ್ಟೆಂಬರ್ 10: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ದ ಬಹುಕೋಟಿ ಹಗರಣದ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ 82 ನೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಹಗರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಅವರು ಭಾಗಿಯಾಗಿದ್ದಾರೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೋಷಾರೋಪ ಪಟ್ಟಿಯಲ್ಲಿ ಹಗರಣ ಹೇಗೆ ನಡೆಯಿತೆಂದು ಎಳೆಎಳೆಯಾಗಿ ಬರೆದಿದ್ದಾರೆ. ಹಗರಣದ ಮಾಸ್ಟರ್ ಮೈಂಡ್ ಬಿ. ನಾಗೇಂದ್ರ ಎಂದು ಉಲ್ಲೇಖಿಸಲಾಗಿದೆ. ಬಿ. ನಾಗೇಂದ್ರ ಅವರು ಹಗರಣದ ಆರೋಪಿ, ಹೈದರಾಬಾದ್ನ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ನ ಎಂಡಿ ಸತ್ಯನಾರಾಯಣವರ್ಮಾ ಜೊತೆ ನಿಕಟ ಸಂಪರ್ಕ ಹೊಂದಿದ್ದು, ಹಣದ ಬಳಕೆಯ ಬಗ್ಗೆ ಬರೆದಿದ್ದಾರೆ.
ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಣತಿಯಂತೆ ಸಂಪೂರ್ಣ ಹಣದ ವಹಿವಾಟು ನಡೆದಿದೆ. 21 ಕೋಟಿ ರೂ. ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಮನಿಟ್ರಯಲ್ ನಡೆದಿದೆ ಎಂದು ತನಿಖೆ ವೇಳೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಿ ನಾಗೇಂದ್ರ ಸೇರಿದಂತೆ ಐವರು ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.