ಮನೆ ರಾಜ್ಯ ವಂದಿತಾ ಶರ್ಮಾ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ

ವಂದಿತಾ ಶರ್ಮಾ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ

0

ಬೆಂಗಳೂರು (Bengaluru)- ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ (Vandita Sharma) ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಪ್ರಸ್ತುತ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ವಂದಿತಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಲಿದ್ದಾರೆ. 1986ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ವಂದಿತಾ ಅವರ ಸೇವಾವಧಿ 2023ರ ನವೆಂಬರ್‌ವರೆಗೂ ಇದೆ.

ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್‌ ಅವರು ಇದೇ ತಿಂಗಳು 31ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ. ಹೀಗಾಗಿ ವಂದಿತಾ ಶರ್ಮಾ ಅವರನ್ನು ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.

ಮಹಿಳೆಯರ ದರ್ಬಾರ್ !

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000 ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006 ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017 ನೇ ಇಸವಿಯಲ್ಲಿ ಕೆ. ರತ್ನ ಪ್ರಭ ಅವರೂ ಅಲಂಕರಿಸಿದ್ದರು.

ಕೆ ರತ್ನ ಪ್ರಭ ಅವರ ಅಧಿಕಾರಾವಧಿಯಲ್ಲಿ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಹುದ್ದೆಯನ್ನು ನೀಲಮಣಿ ಎನ್ ರಾಜು ಅಲಂಕರಿಸಿದಾಗ ಎರಡು ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದಾರೆ ಎಂಬುದು ಗಮನಾರ್ಹ ಅಂಶವಾಗಿತ್ತು.

ಇದೀಗ ವಂದಿತಾ ಶರ್ಮಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದೊಡನೆಯೇ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಇರುವ ಮೂರೂ ಪ್ರಮುಖ ಹುದ್ದೆಗಳನ್ನು ಮಹಿಳೆಯರೇ ಅಲಂಕರಿಸಿದಂತಾಗುತ್ತದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ ಶಕ್ತಿ ಕೇಂದ್ರದ ಶಕ್ತಿಯಾಗಿ ಹೊಸ ದಾಖಲೆ ಸ್ಥಾಪಿಸಲಿದ್ದಾರೆ.

ಹಿಂದಿನ ಲೇಖನದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಗೆ ನಾನು ತಟಸ್ಥ: ಸಂಸದೆ ಸುಮಲತಾ ಅಂಬರೀಶ್
ಮುಂದಿನ ಲೇಖನಮೇ 28ರ ಹವಾಮಾನ ವರದಿ